ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು.
ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಅಪ್ಲಿಕೇಶನ್ ಆಧಾರಿತ ಪ್ಲಾಟ್ಫಾರ್ಮ್ಗಳಿಗೆ ನಿಯಮಗಳ ಕೊರತೆಯೂ ಬಳಕೆದಾರರಲ್ಲಿ ಅಸುರಕ್ಷತೆ ಹೆಚ್ಚಿಸಿದೆ ಎಂದು ಹೇಳಿದ್ದರು.