88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಜಮೀರ್ ಅಹ್ಮದ್ ಖಾನ್

Ravi Talawar
88ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ:  ಜಮೀರ್ ಅಹ್ಮದ್ ಖಾನ್
WhatsApp Group Join Now
Telegram Group Join Now
ಬಳ್ಳಾರಿ,ಜು.01.ಬಳ್ಳಾರಿಯಲ್ಲಿ ಜರುಗಲಿರುವ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟವಾಗಿದ್ದು, ಇದನ್ನು ಚಾರಿತ್ರಿಕವಾಗಿಸಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.
ಮಂಗಳವಾರದAದು, ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಏರ್ಪಡಿಸಿದ್ದ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡಿಗರ ಹೆಮ್ಮೆಯ ಉತ್ಸವವನ್ನು ಚಾರಿತ್ರಿಕವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಜಿಲ್ಲಾಡಳಿತವು ಸಂಪೂರ್ಣ ಸಜ್ಜುಗೊಳಿಸಿ ಸರ್ಕಾರದಿಂದ ಬೇಕಾದ ಎಲ್ಲಾ ಸೌಲಭ್ಯ, ನೆರವು ದೊರಕಿಸಿ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರ ಇನ್ನಷ್ಟು ನಿಕಟವಾಗಿ ಕೆಲಸ ಮಾಡಲಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಮಾತನಾಡಿ, ಇಲ್ಲಿಯವರೆಗೆ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಐದು ಸಮ್ಮೇಳನಗಳು ನಡೆದಿದ್ದು, ಇದು ಆರನೆಯದು ಮತ್ತು ಸ್ವಾತಂತ್ರö್ಯ ನಂತರ ಎರಡನೆಯದಾಗಿದೆ. 68 ವರ್ಷಗಳ ನಂತರ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದು ವಿವರಿಸಿದರು.
ಈಗಾಗಲೇ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್ ಪುರಸ್ಕಾರದ ಮೂಲಕ ಜಾಗತಿಕ ಮನ್ನಣೆ ಪಡೆದಿರುವ ಬಾನು ಮುಷ್ತಾಕ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಇದಕ್ಕೆ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಪ್ರತಿಕ್ರಿಯಿಸಿ, ಈ ಆಯ್ಕೆಯನ್ನು ಮುಕ್ತ ಕಂಠದಿAದ ಶ್ಲಾಘಿಸಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಐದನೇಯ ಮಹಿಳೆ ಮತ್ತು ಮೊದಲ ಅಲ್ಪಸಂಖ್ಯಾತ ಮಹಿಳೆ ಆಗಲಿದ್ದಾರೆ ಎಂಬ ಸಂಗತಿ ಸಂತೋಷ ತರುವಂತಹದ್ದಾಗಿದೆ. ಹೆಚ್ಚಿನದಾಗಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಬಣ್ಣಿಸಿದರು.
ಬಳಿಕ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಇತಿಹಾಸ ವಿವರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು, ಸಮ್ಮೇಳನಗಳಿರುವ ಚಾರಿತ್ರಿಕ ಪರಂಪರೆಗೆ ಒತ್ತು ನೀಡಬೇಕಿದೆ ಎಂದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, 88 ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇದಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 2012ರಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗಿದ್ದ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಸಾಂಕೇತಿಕವಾಗಿ ವಿಶೇಷ ಗುರುತಿನ ಚೀಟಿ ನೀಡಲಾಯಿತು.
ಬಳಿಕ ಸಚಿವರು ಮತ್ತು ಬಳ್ಳಾರಿ ಜಿಲ್ಲಾಡಳಿತದ ಅಧಿಕಾರಿಗಳು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಹೊರ ಮತ್ತು ಒಳ ಆವರಣ ವೀಕ್ಷಿಸಿ ಪರಂಪರೆ ಮತ್ತು ಆಧುನಿಕತೆ ಬೆಸೆದಿರುವ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ  ಗೌರವ ಕಾರ್ಯದರ್ಶಿ ಬಿ.ಎಂ. ಪಟೇಲ್ ಪಾಂಡು, ಮಾಧ್ಯಮ ಸಂಚಾಲಕರಾದ ಎನ್.ಎಸ್.ಶ್ರೀಧರಮೂರ್ತಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಇದ್ದರು.
WhatsApp Group Join Now
Telegram Group Join Now
Share This Article