ಬೆಂಗಳೂರು: ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಭೇಟಿ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ 10 ದಿನಗಳಿಂದ ಜಗನ್ ಮೋಹನ್ ರೆಡ್ಡಿ ಅವರು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇತ್ತ ಕೆಲ ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಡಿಸಿಎಂ ಡಿಕೆಶಿ ಹಾಗೂ ಜಗನ್ ಮೋಹನ್ ರೆಡ್ಡಿ ಪರಸ್ಪರ ಹೂಗುಚ್ಛ ನೀಡಿ ಭೇಟಿಯಾಗಿರುವ ಫೋಟೊ ಹರಿದಾಡುತ್ತಿದೆ.
ಈ ಸಂಬಂಧ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟೀಕರಣ ನೀಡಿರುವ ಡಿ.ಕೆ.ಶಿವಕುಮಾರ್, ನಾನು ಆಂಧ್ರ ಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿರುವಂತೆ ಯಾರೋ ಕಿಡಿಗೇಡಿಗಳು ನಕಲಿ ಫೋಟೊ ಸೃಷ್ಟಿಸಿ ಹರಡುತ್ತಿದ್ದಾರೆ. ನಾನು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ. ಯಾರೂ ಕೂಡ ಇದನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.
ಆಂಧ್ರಪ್ರದೇಶದ ಬಿಜೆಪಿ ಶಾಸಕರೊಬ್ಬರು ಇತ್ತೀಚೆಗೆ ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಡಿಕೆಶಿ ಮತ್ತು ಜಗನ್ ಮೋಹನ್ ಬೆಂಗಳೂರಲ್ಲಿ ಭೇಟಿಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಆ ಊಹಾಪೋಹಗಳಿಗೆ ಡಿಸಿಎಂ ಡಿಕೆಶಿ ತೆರೆ ಎಳೆದಿದ್ದು, ನಾನು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ. ಯಾರೂ ಕೂಡ ಇದನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.