ಲಖನೌ : ಉತ್ತರ ಪ್ರದೇಶ ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ನೆರೆ ಆವರಿಸಿದೆ. 700ಕ್ಕೂ ಹೆಚ್ಚು ಹಳ್ಳಿಗಳು ಪ್ರವಾಹಕ್ಕೆ ತುತ್ತಾಗಿವೆ. ನದಿಗಳು ಉಕ್ಕಿ ಹರಿಯುತ್ತಿವೆ. ಭಾರಿ ಮಳೆಯ ಅಬ್ಬರಕ್ಕೆ 11 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಪರಿಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ಅವಧಿಯಲ್ಲಿ ಸರಾಸರಿ 7.5 ಮಿಮೀ ಮಳೆ ದಾಖಲಾಗಿದೆ. ಆರು ಜನರು ಪ್ರವಾಹದ ಅಬ್ಬರಕ್ಕೆ ಸಿಲುಕಿ ಮೃತಪಟ್ಟರೆ, ಸಿಡಿಲು ಮತ್ತು ಹಾವು ಕಡಿತದಿಂದ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, 17 ಜಿಲ್ಲೆಗಳ 732 ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ.
ಷಹಜಹಾನ್‌ಪುರ ಮತ್ತು ಬರೇಲಿಯ ನಗರ ಪ್ರದೇಶಗಳಲ್ಲೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಹಜಾನ್‌ಪುರ ಜಿಲ್ಲೆಯ ಲಖನೌ – ಬರೇಲಿ ಹೆದ್ದಾರಿಯಲ್ಲಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಯಿತು. ಬರೇಲಿ ಜಿಲ್ಲೆಯಲ್ಲೂ ಇದೇ ರೀತಿಯ ಸಮಸ್ಯೆಗಳು ವರದಿಯಾಗಿವೆ.
“ಪ್ರವಾಹ ಪೀಡಿತ ಪ್ರದೇಶಗಳಲ್ಲಿ NDRF ಮತ್ತು SDRF ತಂಡಗಳು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸುವುದ ಜೊತೆಗೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಜನರಿಗಾಗಿ ಪ್ರವಾಹ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದೇವೆ” ಎಂದು ರಾಜ್ಯ ಪರಿಹಾರ ಆಯುಕ್ತ ನವೀನ್ ಕುಮಾರ್ ಹೇಳಿದ್ದಾರೆ.