ಬೆಂಗಳೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡಿ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗುರುವಾರ ಹೇಳಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ನ ಕೆ.ಎಸ್. ಬಸವಂತಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೀದರ್ ಜಿಲ್ಲೆಯಲ್ಲಿ ಈ ವ್ಯವಸ್ಥೆ ಯಶಸ್ವಿಯಾಗಿದೆ. ಅದೇ ಮಾದರಿಯನ್ನು ಎಲ್ಲ ಕಡೆ ಅನುಸರಿಸುವ ಚಿಂತನೆಯಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡುವ ಪ್ರಸ್ತಾಪ ಆರ್ಥಿಕ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಆಯಾ ಜಿಲ್ಲೆ ಮೂಲಕ ಹೊರಗುತ್ತಿಗೆ ನೌಕರರಿಗೆ ನೇಮಕ ಮಾಡಲು ಚಾಲನೆ ದೊರೆಯಲಿದೆ. ರಾಜ್ಯದಲ್ಲಿ ವಿವಿಧ ಇಲಾಖೆಗಳ ಮೂಲಕ 54 ಸಾವಿರಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ. 405 ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ಲೈಸೆನ್ಸ್ ನೀಡಲಾಗಿದೆ ಎಂದು ತಿಳಿಸಿದರು.
50 ಜನರ ಹೊರಗುತ್ತಿಗೆ ವೇತನ ಪಡೆದು 25 ಜನರಿಂದ ಕೆಲಸ ಮಾಡುತ್ತಿರುವುದು ಸೇರಿದಂತೆ ಹೊರಗುತ್ತಿಗೆ ನೌಕರರ ವಿಚಾರದಲ್ಲಿ ಹಲವು ಸಮಸ್ಯೆಗಳಿರುವುದು ಗಮನಕ್ಕೆ ಬಂದಿದೆ. ಆ ಕಾರಣಕ್ಕಾಗಿ ಈ ಹೊಸ ಪದ್ಧತಿಯನ್ನು ಜಾರಿ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ಹೊರಗುತ್ತಿಗೆ ಏಜೆನ್ಸಿಗಳಿಗೆ ಕಡಿವಾಣ ಬೀಳಲಿದೆ ಎಂದರು.