ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪ ಸಂಬಂಧ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧದ ಎಫ್ಐಆರ್ ಹಾಗೂ ಕನಕಪುರದ 1ನೇ ಹೆಚ್ಚುವರಿ ಸಿವಿಲ್ ಮತ್ತು ನ್ಯಾಯಾಲಯದ ವಿಚಾರಣೆ ರದ್ದುಕೋರಿ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಇದೇ ಪ್ರಕರಣ ಸಂಬಂಧ ಕಾಂಗ್ರೆಸ್ ಇತರೆ ಮುಖಂಡರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ಅದನ್ನು ಪರಿಗಣಿಸಿದ ನ್ಯಾಯಪೀಠ, ಯತೀಂದ್ರ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.