ಬೆಳಗಾವಿ, ಜುಲೈ 31: ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜು.31) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ ನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಆಹಾರ ಸಾಮಗ್ರಿ, ಔಷಧ ಮತ್ತು ನೀರು ಮತ್ತಿತರ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಜಾನುವಾರು ಶಿಬಿರಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು.
2019 ರಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ತಿಳಿದುಕೊಂಡು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಕಾಳಜಿ ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು. ಈಗಾಗಲೇ ಸಿದ್ಧತೆ ಮಾಡಿಕೊಂಡಿರುವುದರಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.
ಜಲಾಶಯಗಳಿಂದ ನೀರು ಬಿಡುಗಡೆ ವೇಳೆ ಬ್ಯಾರೇಜುಗಳನ್ನು ನಿರ್ವಹಿಸುವ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು.
ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವುದರಿಂದ ಜನರ ಪ್ರಾಣ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು.
ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ತಹಶೀಲ್ದಾರರ ಖಾತೆಯಲ್ಲಿ ಸಾಕಷ್ಟು ಹಣವಿದೆ. ಒಂದು ವೇಳೆ ಹಣದ ಕೊರತೆ ಇದ್ದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆಯ ಹಿನ್ನೆಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಹಾನಿಯ ಬಗ್ಗೆ ಸಮರ್ಪಕವಾಗಿ ಪರಿಶೀಲನೆ ನಡೆಸಬೇಕು. ಅದೇ ರೀತಿ ರಸ್ತೆಗಳ ಹಾನಿಯ ಸಮೀಕ್ಷೆ ನಡೆಸಬೇಕು ಎಂದರು.
ಆಗಸ್ಟ್ ನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಬಹುದು. ಜಲಾಶಯ ನಿರ್ವಹಣೆ, ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಯಾವುದೇ ಹಂತದಲ್ಲೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ಅಥವಾ ಜಾನುವಾರುಗಳ ಜೀವಹಾನಿಯಾಗಬಾರದು.
ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಅಧಿಕಾರಿಗಳು ರಜೆ ತೆರಳದೇ ಯಾವಾಗಲೂ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ತಿಳಿಸಿದರು.
ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ನದಿಯ ಒಳಹರಿವು ಕ್ರಮೇಣ ಕಡಿಮೆಯಾಗುತ್ತಿದೆ. ಆದರೂ ಕಳೆದ ಒಂದು ವಾರದಿಂದ ಮುಂಜಾಗ್ರತಾ ಕ್ರಮವಾಗಿ 123 ಟಿಎಂಸಿ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹವಾಗಿದ್ದ 97 ಟಿಎಂಸಿ ನೀರನ್ನು ಒಂದು ವಾರದಿಂದ ಪ್ರತಿದಿನ ಬಿಡುಗಡೆಗೊಳಿಸುವ ಮೂಲಕ ಸದ್ಯಕ್ಕೆ 67 ಟಿಎಂಸಿ ಗೆ ಕಡಿಮೆಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿವರಿಸಿದರು.
ನೆರೆಯ ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಹಾಗೂ ರಾಜ್ಯದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಜಲಾಶಯಗಳ ಜಲಮಟ್ಟವನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸುವ ಮೂಲಕ ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದರು.
ಕೃಷ್ಣಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಎಲ್ಲ ನದಿಪಾತ್ರದ ಗ್ರಾಮಗಳ ಜನರ ರಕ್ಷಣೆ ಮತ್ತು ತುರ್ತು ಸಂದರ್ಭದಲ್ಲಿ ಸ್ಥಳಾಂತರಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಜನರು ಅಥವಾ ಜಾನುವಾರುಗಳ ಜೀವಹಾನಿ ಪ್ರಕರಣಗಳಲ್ಲಿ 24 ಗಂಟೆಗಳಲ್ಲಿ ಸಂಬಂಧಿಸಿದ ಕುಟುಂಬದವರಿಗೆ ಪರಿಹಾರ ನೀಡುವಂತೆ ಎಲ್ಲ ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.
ಜಿಲ್ಲೆಯಾದ್ಯಂತ 427 ಕಾಳಜಿ ಕೇಂದ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಅಗತ್ಯತೆ ಆಧರಿಸಿ ಜು.30 ರವರೆಗೆ 46 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದ 3684 ಕುಟುಂಬಗಳ 10,304 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗಿರುತ್ತದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ನಿರಂತರವಾಗಿ ಕಾರ್ಯನಿರ್ವಹಿಸುವ ಮೂಲಕ ಸಕಲ ಸಿದ್ಧತೆ ಮಾಡಿಕೊಂಡಿವೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ವಿವರಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದಲ್ಲಿರುವ ಕೆಲವೇ ಕೆಲವು ವಸತಿ ಪ್ರದೇಶಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಯಾವುದೇ ಸ್ಥಳಕ್ಕೂ ತಕ್ಷಣವೇ ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ನೆರವು ತಲುಪಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದರು.
ಜನರ ಜೀವರಕ್ಷಣೆಗೆ ಕ್ರಮ: ಜನರ ಸುರಕ್ಷತೆ ದೃಷ್ಟಿಯಿಂದ ಗೋಕಾಕ್ ಫಾಲ್ಸ್ ಸೇರಿದಂತೆ ಕೆಲವು ಫಾಲ್ಸ್ ಗಳ ಸಮೀಪ ಹೋಗುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಇದಲ್ಲದೇ ಮುಳುಗಡೆಯಾಗಿರುವ ಕೆಳಹಂತದ ಸೇತುವೆಗಳ ಮೇಲೆ ಜನ ಮತ್ತು ವಾಹನ ಸಂಚಾರ ತಡೆಗೆ ಬ್ಯಾರಿಕೇಡ್ ಅಳವಡಿಸಿ ಸಿಬ್ಬಂದಿ ನಿಯೋಜಿಸಲಾಗಿದೆ.
ಮುಳುಗಡೆಯಾಗಿರುವ ಕೆಲವು ಸೇತುವೆಗಳು ಸದ್ಯಕ್ಕೆ ಸಂಚಾರಕ್ಕೆ ಮುಕ್ತವಾಗಿದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಡಾ.ಗುಳೇದ ವಿವರಿಸಿದರು.
ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ರೋಹನ್ ಜಗದೀಶ್, ಪ್ರೊಬೇಷನರಿ ಐ.ಎ..ಎಸ್. ಅಧಿಕಾರಿ ದಿನೇಶ್ ಕುಮಾರ್ ಮೀನಾ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯ ಎಲ್ಲ ತಹಶೀಲ್ದಾರರು ವಿಡಿಯೋ ಸಂವಾದದ ಮೂಲಕ ಹಾಜರಾಗಿದ್ದರು.