ಮಡಿಕೇರಿ, ಆಗಸ್ಟ್ 5: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದೆ.
ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಯಿತು. ಶೀಘ್ರದಲ್ಲೇ ಸ್ಥಳಾಂತರ ಆಗಬಹುದು ಎಂದು ಮೂಲಗಳು ತಿಳಿಸಿವೆ.
ಜಿಲ್ಲಾಡಳಿತ ಸದ್ಯ 14 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಅಲ್ಲಿ 200 ಕ್ಕೂ ಹೆಚ್ಚು ನಿವಾಸಿಗಳು ಆಶ್ರಯ ಪಡೆದಿದ್ದಾರೆ. ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿ 95 ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದೆ.
ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವರ್ಷ ಶೇ 24ರಷ್ಟು ಅಧಿಕ ಮಳೆಯಾಗಿದ್ದು, ಈ ತಿಂಗಳು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿಯೊಂದು ಇತ್ತಿಚೆಗೆ ಮುನ್ಸೂಚನೆ ನೀಡಿತ್ತು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ನಲ್ಲಿ ಮಾಹಿತಿ ನೀಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿಯ ಶಿರೂರು ಎಂಬಲ್ಲಿ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅದಾದ ನಂತರ ರಾಜ್ಯದ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.