ಬೆಂಗಳೂರು, ಆಗಸ್ಟ್ 8: ಸದಾ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ದಿಢೀರಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಂದು ವರ್ಷದ ನಂತರ ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ.
ಸುಮಾರು ಒಂದು ಗಂಟೆ ಕಾಲ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವರ್ಷದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿ ಸುದೀರ್ಘ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಕಳೆದ ವಾರವಷ್ಟೇ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಪಕ್ಷ ಹಾಗೂ ಸರ್ಕಾರದ ಪ್ರಮುಖ ಬೆಳವಣಿಗೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಕೆಸಿ ವೇಣುಗೋಪಾಲ ಹಾಗೂ ಪ್ರಮುಖ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಮೈಸೂರಿನಲ್ಲಿ ಶುಕ್ರವಾರ ನಡೆಯಲಿರುವ ಜನಾಂದೋಲನ ಸಮಾವೇಶದ ವಿಚಾರವಾಗಿಯೂ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.