ಹುಬ್ಬಳ್ಳಿ: ಜನ ಸಾಮಾನ್ಯರಲ್ಲಿ ವಿಶೇಷವಾಗಿ ಯುವಕರಿಗೆ ಪ್ರಜಾಪ್ರಭುತ್ವದ ಮಹತ್ವ ಹಾಗೂ ಜವಾಬ್ದಾರಿ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 15 ರಂದು ಧಾರವಾಡದಲ್ಲಿ ಜಿಲ್ಲೆಯಲ್ಲಿ ನಡೆಯುವ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 55 ಕಿ.ಮೀ.ಉದ್ದದ 55 ಸಾವಿರ ಜನರು ಪಾಲ್ಗೊಳ್ಳುವ ಮಾನವ ಸರಪಳಿಯನ್ನು ಯಶಸ್ವಿಗೊಳಿಸೋಣ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕರೆ ನೀಡಿದರು.
ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಾಣ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಇಡೀ ಜಗತ್ತಿಗೆ ಮಾದರಿಯಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆಯನ್ನು ಸಮಾಜದ ಎಲ್ಲ ಬಾಂಧವರು ದಿನನಿತ್ಯ ನೆನಪಿಸಿಕೊಳ್ಳಬೇಕೆಂದು ತಿಳಿಸಿದರು.
ಸಮಾಜದಲ್ಲಿ ಬದಲಾವಣೆ ಬರಬೇಕು. ನಾವಿರುವ ಸ್ಥಿತಿಗೆ ಅಂಬೇಡ್ಕರವರ ವಿಚಾರಧಾರೆ, ಸಮಾನತೆ, ಶಿಕ್ಷಣ, ಅಭಿವೃದ್ಧಿ ಪರಿಕಲ್ಪನೆಯ ಸಂವಿಧಾನ ನೀಡಿದ್ದು ಮಹತ್ವದ ಕೊಡುಗೆ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆ ಪ್ರತಿಯೊಬ್ಬ ಯುವಕರಿಗೆ ಗೊತ್ತಾಗಬೇಕು. ಈ ಸಮಾಜಕ್ಕೆ ಸಂವಿಧಾನವೇ ಅಡಿಪಾಯ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅತ್ಯಂತ ಪರಿಣಾಮಕಾರಿಯಾಗಿ ಆಚರಿಸಲು ಬೀದರ್ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಧಾರವಾಡದಲ್ಲಿ 55 ಕಿ.ಮೀ. ಉದ್ದದ 55 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ರೈತ ಸಂಘಟನೆಗಳು, ಸಂಘ ಸಂಸ್ಥೆಗಳು ಹುಮ್ಮಸ್ಸಿನಿಂದ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ನುಡಿದರು.
ಬೆಳಿಗ್ಗೆ 8:30 ಕ್ಕೆ ಮಾನವ ಸರಪಳಿ ರಚನ: 15 ರಂದು ಜಿಲ್ಲೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಮಾನವ ಸರಪಳಿ ಆರಂಭವಾಗಿ ಬೆಳಿಗ್ಗೆ 8:30 ಗೆ ಮಾನವ ಸರಪಳಿ ನಿರ್ಮಾಣವಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸಂಸ್ಥೆಯಿಂದ ಬೆಳಿಗ್ಗೆ 8:30 ರಿಂದ 8:40 ರವರೆಗೆ ಮಾನವ ಸರಪಳಿ ಚಿತ್ರೀಕರಣ ಮಾಡಲಾಗುತ್ತದೆ. ಬೆಳಿಗ್ಗೆ 8:45 ಗಂಟೆಗೆ ಮಾನವ ಸರಪಳಿಯಲ್ಲಿ ಪಾಲ್ಗೊಂಡ ಸರ್ವರಿಂದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಜರುಗುತ್ತದೆ. 9 ಗಂಟೆ ಸುಮಾರಿಗೆ ಕಾರ್ಯಕ್ರಮ ಮುಕ್ತಾಯವಾಗುತ್ತದೆ.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.