ನವದೆಹಲಿ, ಸೆಪ್ಟೆಂಬರ್ 26: ಭ್ರಷ್ಟಾಚಾರ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಚರ್ಚೆಗಳು ನಡೆಯುತ್ತವೆ, ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದರು.
ಈ ಹಿಂದೆ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಕಾಂಗ್ರೆಸ್ನಲ್ಲಿ 40 ಪರ್ಸೆಂಟ್ಗೂ ಹೆಚ್ಚು ಕಮಿಷನ್ ಕೇಳ್ತಾರಂತೆ ಎಂಬ ಆರೋಪ ನಂತರ ಕೇಳಿಬಂತು. ಹೀಗಂತ ತುಮಕೂರಿನಲ್ಲಿ ಗುತ್ತಿಗೆದಾರರೊಬ್ಬರು ಹೇಳಿದ್ದಾರೆ ಎಂದು ಸಿದ್ದರಾಮಯ್ಯಗೆ ಹೆಚ್ಡಿಕೆ ತಿರುಗೇಟು ನೀಡಿದರು.
ಗಂಗೇನಹಳ್ಳಿ ಡಿನೊಟಿಫಿಕೇಷನ್ ವಿಚಾರವಾಗಿ ನನಗೆ ಯಾವುದೇ ನೊಟೀಸ್ ಕೊಟ್ಟಿಲ್ಲ. ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಕದ್ದು ಹೋಗಲ್ಲ, ಈ ಕ್ಷಣದವರೆಗೆ ನನ್ನ ಜೊತೆ ಯಾರೂ ಮಾತನಾಡಿಲ್ಲ. ಈ ಸರಕಾರದಲ್ಲಿ ಸುಳ್ಳು ಹೇಳಿಕೆ, ಸುಳ್ಳು ಪ್ರಚಾರ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಮುಡಾ ಹಗರಣ ಸಂಬಂಧ ಹರಿಯಾಣದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ, ಮೋದಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದಿದ್ದರು. ಅಲ್ಲದೆ, ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು.