ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಜೃಂಭಣೆಯಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ 1924ರಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವದ ನಿಮಿತ್ತ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ರಾಜ್ಯವ್ಯಾಪಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇ ಬಾಗೇವಾಡಿಯಲ್ಲಿ ಚಾವಡಿಕೂಟದಿಂದ ಪಡಿ ಬಸವೇಶ್ವರ ದೇವಸ್ಥಾನದವರೆಗೆ ‘ಗಾಂಧಿ ನಡಿಗೆ’ ಕಾರ್ಯಕ್ರಮದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದರು.
ಮುಂದಿನ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಜಂಟಿ ಅಧಿವೇಶನ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಅಗತ್ಯ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ. ಇಂದಿನ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ನೂರಾರು ಕಾರ್ಯಕರ್ತರು, ಯುವಕರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.