ಬೆಂಗಳೂರು: ನವೆಂಬರ್ 15ರೊಳಗೆ ನಗರದಲ್ಲಿನ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.
ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು.
ತಹಶೀಲ್ದಾರ್ ಅವರು ಎಲ್ಲಾ ಪ್ರಸ್ತಾವನೆಯನ್ನು ಪರಾಮರ್ಶಿಸಿ, ಆದೇಶ ಹೊರಡಿಸಬೇಕು. ಎಲ್ಲಾ ವಲಯ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಬೇಕು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕೆರೆಗಳ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ದಾಖಲೆ ಬಂದ ಕೂಡಲೇ ಒತ್ತುವರಿ ತೆರವುಗೊಳಿಸಬೇಕು ಎಂದು ಸೂಚಿಸಿದರು.