ಬೆಂಗಳೂರು, ಅಕ್ಟೋಬರ್ 26: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಅ.26) ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.
ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಈ ಕುರಿತು ಡಿಸಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.