ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕಾಯ್ದೆ ತಿದ್ದುಪಡಿಗೆ ಸಿಎಂ ಸೂಚನೆ

Ravi Talawar
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕಾಯ್ದೆ ತಿದ್ದುಪಡಿಗೆ ಸಿಎಂ ಸೂಚನೆ
WhatsApp Group Join Now
Telegram Group Join Now

ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿರುವುದು ತಿಳಿದುಬಂದಿದೆ. ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮಂಡನೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ 24ರ ಮೀಸಲಾತಿ ನೀಡಿರುವ ಸರ್ಕಾರ, ಒಬಿಸಿ ಸಮುದಾಯಕ್ಕೆ ಶೇ 4 ಮೀಸಲಾತಿ ನೀಡಿದೆ. 2A ಅಡಿ ಗುತ್ತಿಗೆಯಲ್ಲಿ ಶೇ 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ 43ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.

ಸಿಎಂಗೆ ಮನವಿ ಮಾಡಿದ್ದ ಮುಸ್ಲಿಂ ಶಾಸಕ, ಸಚಿವರು

ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕಿಸ್ ಬಾನು ಸಹಿ ಮಾಡಿದ್ದರು. ಇದರಂತೆ, ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article