* 1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆಅನಕೂಲವಾಗುವ ಸುಸಜ್ಜಿತ ಹಾಸ್ಟೆಲ್ ನಿರ್ಮಾಣ
* ಶೂದ್ರರಂತೆ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು
* ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ
* ಮಹಿಳೆಯರು ದುರ್ಬಲರಲ್ಲ, ಹಿಂದುಳಿದವರು ಅಷ್ಟೆ: ಸಿ.ಎಂ.ಸಿದ್ದರಾಮಯ್ಯ
ಮೈಸೂರು ನ 13: ಮಹಿಳೆಯರು ದುರ್ಬಲರಲ್ಲ, ಹಿಂದುಳೀದವರಷ್ಟೇ ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಆದರೆ ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
170 ಕೋಟಿ ರೂ. ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಮತ್ತು ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಹಾಗೂ 49 ಕೋಟಿ ರೂ. ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3, 4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.
ವಿದ್ಯಾರ್ಥಿನಿಯರನ್ನು, ನೀವು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ತಾನೇ ಎಂದು ಸಿ.ಎಂ. ಪ್ರಶ್ನಿಸಿದರು. ಇದಕ್ಕೆ ವಿದ್ಯಾರ್ಥಿನಿಯರು ಹೌದೂ ಎಂದು ಎರಡೂ ಕೈಗಳನ್ನೆತ್ತಿ ಹರ್ಷೋದ್ಗಾರ ವ್ಯಕ್ತಪಡಿಸಿದರು. ಮಹಿಳೆಯರು ಇಲ್ಲಿಯವರೆಗೆ 325 ಕೋಟಿ ಫ್ರೀ ಟಿಕೆಟ್ ಮೂಲಕ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕೆದು ಕರೆ ನೀಡಿದ ಅವರು, ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.