ಬೆಂಗಳೂರು, ನವೆಂಬರ್ 25: ಚುನಾವಣೆಗೂ ಮುನ್ನ ಕೆಲವು ದಿನಗಳ ಹಿಂದೆ ಕಾಂಗ್ರೆಸ್ನಲ್ಲಿ ಸ್ಫೋಟಗೊಂಡಿದ್ದ ಅನುದಾನ ಅಸಮಾಧಾನದ ಬಾಂಬ್, ಇದೀಗ ಮತ್ತೆ ಸದ್ದು ಮಾಡುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ಅನುದಾನದ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ಹೆಚ್ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದಾರೆ.
ವಿಜಯನಗರ ಕ್ಷೇತ್ರಕ್ಕೆ ಅಂದಾಜು 150 ಕೋಟಿ ರೂಪಾಯಿ ಅನುದಾನ ಬಂದರೂ ಶಾಸಕ ಗವಿಯಪ್ಪ ಸುಳ್ಳು ಹೇಳುತ್ತಾರೆ ಎಂದು ಇಮಾಮ್ ನಿಯಾಜಿ ಅಸಮಾಧಾನ ಹೊರಹಾಕಿದ್ದಾರೆ. ಎರಡು ದಿನಗಳ ಹಿಂದಷ್ಟೇ, ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಶಾಸಕ ಗವಿಯಪ್ಪ ಹೇಳಿದ್ದರು. ಇದಕ್ಕೆ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ದಾಖಲೆ ಸಮೇತ ತಿರುಗೇಟು ಕೊಟ್ಟಿದ್ದಾರೆ.
ಮತ್ತೊಂದೆಡೆ, ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಕೊಪ್ಪಳ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 140 ಕೋಟಿ ರೂಪಾಯಿ ಅನುದಾನ ಬಂದಿದೆ. ಆದರೆ, ಗಂಗಾವತಿ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.