ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಒಟ್ಟು 16 ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಲಿದೆ. ಎರಡು ಸದನಗಳ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ 2024 ನ್ನು ಪಟ್ಟಿ ಮಾಡಿದೆ. ಸಹಕಾರಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದನ್ನು ಒಳಗೊಂಡಂತೆ 5 ಹೊಸ ಕರಡುಗಳನ್ನು ಒಳಗೊಂಡಿವೆ.
ಭಾನುವಾರ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ವೇಳೆ ಅದಾನಿ ಗ್ರೂಪ್ ಲಂಚ ಪ್ರಕರಣದ ಕುರಿತು ಉಭಯ ಸದನಗಳಲ್ಲಿ ಚರ್ಚೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸಿತು. ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ಪ್ರತಿಪಕ್ಷಗಳು ಸರ್ಕಾರದಿಂದ ಉತ್ತರವನ್ನು ಬಯಸುತ್ತವೆ. ಆದರೆ, ಎಲ್ಲಾ ವಿಷಯಗಳ ಬಗ್ಗೆ ನಿಯಮಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ. ಚರ್ಚಿಸಬೇಕಾದ ವಿಷಯಗಳನ್ನು ಸಂಸತ್ತಿನ ವ್ಯವಹಾರ ಸಲಹಾ ಸಮಿತಿಯು ನಿರ್ಧರಿಸುತ್ತದೆ.
ಇಂದು ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಇಂಡಿಯಾ ಒಕ್ಕೂಟದ ನಾಯಕರು ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಸತ್ ಭವನದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರತಿಪಕ್ಷಗಳು ಅಧಿವೇಶನಕ್ಕೆ ರಣತಂತ್ರ ಸಿದ್ಧಪಡಿಸಲಿವೆ.
ಒಂದು ರಾಷ್ಟ್ರ-ಒಂದು ಚುನಾವಣೆ ಮತ್ತು ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಈಗಾಗಲೇ ಸಂಘರ್ಷವಿದೆ. ವಕ್ಫ್ ವಿಧೇಯಕಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಜೆಪಿಸಿ ಸಭೆಯಲ್ಲಿ ಈಗಾಗಲೇ ಸಾಕಷ್ಟು ಗದ್ದಲ ಎದ್ದಿದೆ.