ಬೆಂಗಳೂರು, ಡಿಸೆಂಬರ್ 3: ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದ್ದು, ಈ ವಿಚಾರವಾಗಿ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಇದರೊಂದಿಗೆ, ಐಟಿ ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಕೂಗಿನ ಬಳಿಕ ಇದೀಗ ಆಸ್ಪತ್ರೆಗಳಲ್ಲಿಯೂ ಕನ್ನಡ ಕಡ್ಡಾಯಕ್ಕೆ ಕೂಗು ಆರಂಭವಾದಂತಾಗಿದೆ.
ಆಸ್ಪತ್ರೆಗಳಲ್ಲಿ ನೇಮಕಾತಿ ಮಾಡುವಾಗ ಶೇ 60 ರಷ್ಟು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ. ಈ ವಿಚಾರವಾಗಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಎಲ್ಲಾ ಆಸ್ಪತ್ರೆಗಳಲ್ಲಿ ಆರೋಗ್ಯದ ಸಮಸ್ಯೆ ಬಗ್ಗೆ ಎಲ್ಲರಿಗೂ ಇಂಗ್ಲಿಷ್ನಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಇದರಿಂದ ವೈದ್ಯರಿಗೆ ರೋಗಿಗಳ ಸಮಸ್ಯೆ ಏನೆಂಬುದು ಸರಿಯಾಗಿ ತಿಳಿಯದೇ ಯಡವಟ್ಟುಗಳಾಗುತ್ತಿವೆ. ಹೀಗಾಗಿ ಪ್ರಾದೇಶಿಕ ಭಾಷೆಯ ಜನರಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಇದರಿಂದ ರೋಗಿಗಳ ಆರೋಗ್ಯಕ್ಕೂ ಒಳಿತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಆಸ್ಪತ್ರೆಗಳಲ್ಲಿ ಹೆಚ್ಚಿನ ನರ್ಸ್ಗಳು, ವೈದ್ಯರಿಗೆ ಕನ್ನಡ ಬರುತ್ತಿಲ್ಲ. ಹೀಗಾಗಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.