ಬೆಂಗಳೂರು, ಜನವರಿ 10: ಸಂವಿಧಾನ ವಿಚಾರದಲ್ಲಿ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸುತ್ತಲೇ ಇರುವ ಬಿಜೆಪಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇದೆ. ಇದೀಗ ಸಂವಿಧಾನ ಗೌರವ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ‘ಭೀಮ ಸಂಗಮ’ ಅಭಿಯಾನಕ್ಕೆ ಬಿಜೆಪಿ ಮುಂದಾಗಿದೆ. ಈ ಮೂಲಕ ಸಂವಿಧಾನ ವಿಚಾರದಲ್ಲಿ ಆಗಿರುವ ಚುನಾವಣಾ ಹಿನ್ನೆಡೆಯನ್ನು ಭರ್ತಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಜನವರಿ 25 ರೊಳಗೆ ರಾಜ್ಯವ್ಯಾಪಿ ಭೀಮ ಸಂಗಮ ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಾಗಿದ್ದು, ಶಾಸಕರು ಮತ್ತು ಸಂಸದರಿಗೆ ಜವಾಬ್ದಾರಿ ಹೊರಿಸಲಾಗಿದೆ.
ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ತಮ್ಮ ಮನೆಗಳಲ್ಲಿ ನಡೆಸಲಿರುವ ಕಾರ್ಯಕ್ರಮ ಇದಾಗಿದ್ದು, ಎಸ್ಸಿ ಮತ್ತು ಎಸ್ಟಿ ಸಮುದಾಯದವರನ್ನು ತಮ್ಮ ಮನೆಗೆ ಕರೆಸಿಕೊಂಡು ಸನ್ಮಾನ ಮಾಡಲಿದ್ದಾರೆ.
ಮನೆ ಮನೆಗಳಿಗೆ ಅಂಬೇಡ್ಕರ್ ಅವರ ವಿಚಾರಧಾರೆ ಮುಟ್ಟಿಸುವುದು, ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳನ್ನು ಸೇರಿಸಿ ಭೀಮ ಸಂಗಮ ನಡೆಸುವುದು ಮತ್ತು ಸಂವಿಧಾನ ಪೀಠಿಕೆ ಓದುವ ಭೀಮ ಸಮ್ಮೇಳನ ಹಮ್ಮಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ನಡೆದ ಸಂವಿಧಾನ ಗೌರವ ಅಭಿಯಾನ ಕಾರ್ಯಕ್ರಮದಲ್ಲಿ ಈ ನಿರ್ದೇಶನಗಳನ್ನು ನೀಡಲಾಗಿದೆ. ಅಲ್ಲದೇ, ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷದ ಮುಖವಾಣಿಯಲ್ಲಿ ಸಂವಿಧಾನ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ಮುದ್ರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದು, ರಾಜ್ಯದಲ್ಲೂ ಸಹ ಪಾಲನೆಯಾಗಲಿದೆ.