ಬೆಳಗಾವಿ, ಜನವರಿ 17: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಲ್ಲಗಳೆದಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಮಾತನಾಡಿದ ಅವರು, ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಈ ರೀತಿ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಯಾವ ಸಚಿವರಿಗೂ ಯಾವ ನಾಯಕರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದರು.
ಸತೀಶ್ ಜಾರಕಿಹೊಳಿಗೆ ನೋಟಿಸ್ ನೀಡಿಲ್ಲ: ಸುರ್ಜೇವಾಲ
ಅಲ್ಲದೆ, ಕಾಂಗ್ರೆಸ್ ಆಂತರಿಕ ಸಂಘರ್ಷ ಸಂಬಂಧಿತ ವದಂತಿಗಳನ್ನು ಬಿಜೆಪಿ ನಾಯಕರು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಬಿಜೆಪಿ ಪ್ರಾಯೋಜಿತ ಆಧಾರರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದೂ ಮನವಿ ಮಾಡಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರ ಬದಲಾವಣೆ ಮಾಡುತ್ತಿದ್ದರೆ ಇಲ್ಲೇಕೆ ಬರುತ್ತಿದ್ದರು ಎಂದು ಮರು ಪ್ರಶ್ನಿಸಿದರು.