ಮಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ವೈದ್ಯರಾಗಲು ಮಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮಂಗಳೂರಿನ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ(RGUHS) ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾನು 1994-99ರಲ್ಲಿ ಹಣಕಾಸು ಸಚಿವನಾಗಿದ್ದಾಗ, ಪ್ರತಿ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜು, ಸರ್ಕಾರಿ ಆಸ್ಪತ್ರೆ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆ ಇರಬೇಕು ಎಂದು ಘೋಷಿಸಿದ್ದೆ. ಆದರೆ ಇಲ್ಲಿಯವರೆಗೂ ನಾವು ಅದನ್ನು ಪೂರೈಸಲು ಸಾಧ್ಯವಾಗಿಲ್ಲ ಎಂದರು.
ಮಂಗಳೂರು ವೈದ್ಯಕೀಯ ಕೇಂದ್ರವಾಗಿದ್ದು, ಜನರು ಗುಣಮಟ್ಟದ ಆರೋಗ್ಯ ಸೇವೆ ಪಡೆಯುತ್ತಿರುವ ಅನೇಕ ಖಾಸಗಿ ಆಸ್ಪತ್ರೆಗಳಿವೆ. ಆದರೆ ಮಂಗಳೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ವೈದ್ಯರಾಗಲು ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕು ಮತ್ತು ಸರ್ಕಾರವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ” ಎಂದು ಸಿಎಂ ತಿಳಿಸಿದರು.
ಬಡ ಕುಟುಂಬಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಿಕಿತ್ಸೆಗಾಗಿ 30 ಲಕ್ಷ ರೂ.ಗಳವರೆಗೆ ಆರ್ಥಿಕ ಸಹಾಯವನ್ನು ಪಡೆಯುತ್ತಿದ್ದಾರೆ. “ಅವರು ಇಷ್ಟೊಂದು ದೊಡ್ಡ ಮೊತ್ತವನ್ನು ವ್ಯವಸ್ಥೆ ಮಾಡಲು ಹೇಗೆ ಸಾಧ್ಯ? ಆದ್ದರಿಂದ, ಎಲ್ಲಾ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಒದಗಿಸುವಂತೆ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ವೈದ್ಯಕೀಯ ಶುಲ್ಕವನ್ನು ನಿಗದಿಪಡಿಸುವಂತೆ ನಾವು ಜಯದೇವ ಆಸ್ಪತ್ರೆ ಸೇರಿದಂತೆ ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದರು.