ಬೆಳಗಾವಿ: ಕೇಂದ್ರ ಸರ್ಕಾರದ ಬಜೆಟ್ ರಾಜ್ಯದ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್ನಿಂದ ಕರ್ನಾಟಕದ ಯಾವುದೇ ಬೇಡಿಕೆ ಈಡೇರಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಈ ಬಜೆಟ್ ನೋಡಿದರೆ ರಾಜ್ಯದ ಕೇಂದ್ರ ಸಚಿವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಬಜೆಟ್ ಅನ್ನು ಟೀಕಿಸಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಬಜೆಟ್ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಕರ್ನಾಟಕ ರಾಜ್ಯದ ಜನರ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ನೀಡಿದ್ದಾರೆ. ಹಾಗಾದರೆ ಕರ್ನಾಟಕದವರು ಏನು ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕಕ್ಕೆ ಏನೂ ನೀಡಿಲ್ಲ. ಬೆಂಗಳೂರು ನಗರಕ್ಕೂ ಯಾವುದೇ ಅನುದಾನ ಘೋಷಿಸಿಲ್ಲ. ರಾಜ್ಯದ ಕೇಂದ್ರ ಸಚಿವರು, ಸಂಸದರು ರಾಜ್ಯಕ್ಕೆ ಯೋಜನೆಗಳನ್ನು ತರುವಲ್ಲಿ ವಿಫಲವಾಗಿದ್ದಾರೆ. ರಾಜ್ಯದ ಜನತೆಯ ನಿರೀಕ್ಷೆ ಹುಸಿಗೊಳಿಸಿದ್ದಾರೆ. ಇದು ಸಂಪೂರ್ಣ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.