ಬೆಂಗಳೂರು: ಬಿಡದಿಯ ಸಮೀಪ ಕಳೆದ ಶುಕ್ರವಾರ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಕೊಲೆ ಯತ್ನ ಘಟನೆ ಸಂಬಂಧ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಮುತ್ತಪ್ಪ ರೈ ಅವರ ವಿರುದ್ಧ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ ಮಧ್ಯಂತರ ಆದೇಶ ನೀಡಿದೆ.
ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಕೋರಿ ಮತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಮತ್ತಪ್ಪ ರೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಏಪ್ರಿಲ್ 18 ರಂದು ನಡೆದ ಘಟನೆ ಸಂಬಂಧ ದಾಖಲಿಸಿರುವ ಎಫ್ಐಆರ್ ಹಾಗೂ ಆ ಕುರಿತಂತೆ ರಾಮನಗರ ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಪ್ರೇಟ್ ಮುಂದಿರುವ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದ್ದಾರೆ.
ಅಲ್ಲದೆ, ಘಟನೆಗೂ ನಮ್ಮ ಕಕ್ಷಿದಾರರಿಗೂ ಯಾವುದೇ ಸಂಬಂಧವಿಲ್ಲ. ತನಿಖೆಗೆ ಅವರು ಎಲ್ಲಾ ರೀತಿಯಲ್ಲೂ ಸಹಕರಿಸಲು ಸಿದ್ಧರಿದ್ದಾರೆ. ಎಫ್ಐಆರ್ಗೆ ತಡೆ ನೀಡದಿದ್ದರೆ ತನಿಖೆ ಹೆಸರಿನಲ್ಲಿ ಅರ್ಜಿದಾರರು ಕಿರುಕುಳ ಅನುಭವಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.