ನವದೆಹಲಿ, ಏಪ್ರಿಲ್ 24): ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಜನರು ಸಾವನ್ನಪ್ಪಿದ್ದಾರೆ. ಇದಕ್ಕೆ ತಿರುಗೇಟು ನೀಡಲು ಕೇಂದ್ರ ಸರ್ಕಾರ ಸಹ ಸಜ್ಜಾಗಿದ್ದು, ಈಗಾಗಲೇ ಪಾಕಿಸ್ತಾನ ವಿರುದ್ಧ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಇನ್ನು ಉಗ್ರರ ದಾಳಿ ಸಂಬಂಧ ಮುಂದಿನ ನಡೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಇಂದು (ಏಪ್ರಿಲ್ 24) ಸಂಸತ್ ಭವನದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೆಲ ಮಹತ್ವದ ಅಂಶಗಳನ್ನು ಚರ್ಚಿಸಲಾಗಿದೆ. ಉಗ್ರರ ಕೃತ್ಯವನ್ನ ಖಂಡಿಸಲಾಗಿದೆ. ಅಲ್ಲದೇ ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ತಮ್ಮ ಬೆಂಬಲವಿದೆ ಎಂದು ವಿರೋಧ ಪಕ್ಷಗಳ ನಾಯಕರು ತಿಳಿಸಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಹ ಮಾತನಾಡಿ, ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ ಪ್ರಯತ್ನಗಳ ಬಗ್ಗೆ ಚರ್ಚೆಯಾಗಿದ್ದು, ಸರ್ಕಾರ ಯಾವುದೇ ಕ್ರಮಕೈಗೊಂಡರೂ ನಮ್ಮ ಬೆಂಬಲವಿದೆ ಎಂದಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತನಾಡಿ, ಸಭೆಯಲ್ಲಿ ಎಲ್ಲಾ ರಾಜಕೀಯ ನಾಯಕರು ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ಭದ್ರತೆ ಕುರಿತ ಸಂಪುಟ ತೆಗೆದುಕೊಂಡ ಕ್ರಮವನ್ನು ಸರ್ವಾನುಮತದಿಂದ ಬೆಂಬಲಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರವು ನಮ್ಮ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿರುತ್ತದೆ ಎಂದು ಸರ್ಕಾರ ಸಭೆಯಲ್ಲಿ ಸ್ಪಷ್ಟಪಡಿಸಿತು. ಸರ್ಕಾರವು ತೆಗೆದುಕೊಳ್ಳುತ್ತಿರುವ ಎಲ್ಲಾ ಕ್ರಮಗಳು ಮತ್ತು ಭವಿಷ್ಯದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳಿಗೆ ಎಲ್ಲಾ ನಾಯಕರು ಸರ್ಕಾರದೊಂದಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದರು ಎಂದರು.