ನವದೆಹಲಿ, ಮೇ 15: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಮಧ್ಯಪ್ರದೇಶ ಹೈಕೋರ್ಟ್ ಮೇ 14ರಂದು ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಿದ್ದ ಆದೇಶದ ವಿರುದ್ಧ ವಿಜಯ್ ಶಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕುನ್ವರ್ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಜಯ್ ಶಾ ಸಲ್ಲಿಸಿರುವ ಅರ್ಜಿಯನ್ನು ಮೇ 16ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ವಿವಾದಾತ್ಮಕ ಹೇಳಿಕೆಯನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.