ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ದತ್ತಾಂಶ ಸಂಗ್ರಹಕ್ಕೆ ನಿಗದಿಪಡಿಸಲಾದ ಕಾಲಮಿತಿಯನ್ನು ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸಿನ ಅನುಸಾರ ಸಮೀಕ್ಷೆ ಮಾಡಲಾಗುತ್ತಿದೆ. ಇದೇ 5ರಿಂದ ಪ್ರಾರಂಭವಾದ ಈ ಸಮೀಕ್ಷೆ, 17ಕ್ಕೆ ಕೊನೆಗೊಳ್ಳಲಿದೆ.
ಈ ನಡುವಲ್ಲೇ ಸಮೀಕ್ಷೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮೀಕ್ಷೆಯ ಅವಧಿ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಗುರುವಾರ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಮತ್ತು ಆಯುಕ್ತ ಡಾ. ರಾಕೇಶ್ ಕುಮಾರ್ ಕೆ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದರು. ಮಾತುಕತೆ ವೇಳೆ ಸಮಿತಿಯು ಸಮುದಾಯಗಳ ಪ್ರಶ್ನೆಗಳನ್ನು ಪರಿಹರಿಸಲು ಸಮಯವನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಗಣತಿದಾರರು ಜನರಿಗೆ 46 ಪ್ರಶ್ನೆಗಳನ್ನು ಕೇಳದೆ ಜನಗಣತಿಯನ್ನು ನಡೆಸುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಇದರಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಸಮಿತಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಅಲ್ಲದವರು ತಾವು ಪರಿಶಿಷ್ಟ ಜಾತಿ ಹೆಚ್ಚು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುತ್ತಿದ್ದಾರೆಂದು ದೂರಿದ್ದಾರೆ.