ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದು, ನಗರದಲ್ಲಿ ಡೆಂಗ್ಯೂ ತಡೆಗಟ್ಟಲು ಈ ಬಾರಿ ಹೆಚ್ವಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನ ನೇಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದರು.
ಬುಧವಾರ ನಗರದ ಪುರಭವನದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರೇಟರ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಬೆಂಗಳೂರಿನಲ್ಲಿಯೇ ಶೇ.40ರಿಂದ 50ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯತೆ ನೀಡಬೇಕಾಗಿದೆ. ಜನರು ತಮ್ಮ ಸುತ್ತಮುತ್ತಲಿನ ಪ್ರದೇಶಗಳ ಜವಾಬ್ದಾರಿಯನ್ನು ವಹಿಸಿಕೊಂಡಾಗ ಮಾತ್ರ ನಾವು ನಿಜವಾಗಿಯೂ ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದು ಹೇಳಿದರು.
ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಗ್ರೇಟರ್ ಬೆಂಗಳೂರು ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಡೆಂಗ್ಯೂ ತರುವ ಸೊಳ್ಳಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಾರ್ವಜನಿಕರು ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಗ್ಯೂ ನಿಯಂತ್ರಣ ಮಾಡಲು ಸಾಧ್ಯ ಎಂದು ತಿಳಿಸಿದರು.
ಬೆಂಗಳೂರನ್ನು ಡೆಂಗ್ಯೂ ಮುಕ್ತ ನಗರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದ್ದು, ಸ್ವಯಂಸೇವಕರು, ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಸಿಬ್ಬಂದಿ ಆರೋಗ್ಯಕರ ನಗರವನ್ನು ನಿರ್ಮಿಸಲು ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.