ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮನ್ರೇಗಾ ಅಡಿಯಲ್ಲಿ ವಿವಿಧ ಕಾಮಗಾರಿಗಳು ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ 1,000 ಕೋಟಿ ರೂಪಾಯಿಗಳಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಮಂಗಳವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆರೋಪಿಸಿದರು. ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಬಿಡುಗಡೆ ಮಾಡಿದರು.
ಪ್ರಿಯಾಂಕ್ ಖರ್ಗೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅನೇಕ ಸಂದರ್ಭಗಳಲ್ಲಿ, ಕೈಗೆತ್ತಿಕೊಳ್ಳದ ಕೆಲಸಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಕುಡಚಿ ವಿಧಾನಸಭಾ ಕ್ಷೇತ್ರದ ಒಂದು ಗ್ರಾಮ ಪಂಚಾಯಿತಿಯಲ್ಲಿ 17 ಕೋಟಿ ರೂಪಾಯಿಗಳ ಅಕ್ರಮಗಳು ನಡೆದಿವೆ. ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿಗಳಿದ್ದು, ಅಲ್ಲಿನ ಭ್ರಷ್ಟಾಚಾರದ ಪ್ರಮಾಣವನ್ನು ನೀವೇ ಊಹಿಸಬಹುದು ಎಂದು ಹೇಳಿದರು.