ರಾಮನಗರ, ಆಗಸ್ಟ್ 15: ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು. ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ವಿಧಾನಪರಿಷತ್ ಕಲಾಪದಲ್ಲಿಯೂ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪರಿಷತ್ತಿನಲ್ಲಿ ತಿಳಿಸಿದ್ದರು.