ಬೆಂಗಳೂರು: ಕಳೆದ ವರ್ಷ ಎಸ್ಸಿ ಎಸ್ಪಿ/ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಎಸ್ಸಿ ಎಸ್ಪಿ/ಟಿಎಸ್ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದರು.