ಬೆಂಗಳೂರು, ಸೆಪ್ಟೆಂಬರ್ 05: ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ. ಆ ಮೂಲಕ ರಾಜ್ಯದ ವೈದ್ಯರಿಗೆ ಸಂಕಷ್ಟ ಎದುರಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಅದರಂತೆ ಇಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು.