ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳು ಭಾರಿ ಮಳೆ, ಗಾಳಿ ಎಚ್ಚರಿಕೆ

Ravi Talawar
ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳು ಭಾರಿ ಮಳೆ, ಗಾಳಿ ಎಚ್ಚರಿಕೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 29: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕದಲ್ಲಿ ಇಂದಿನಿಂದ (ಸೆಪ್ಟೆಂಬರ್ 29) ಭಾರಿ ಮಳೆ, ಗಾಳಿ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆಯಿದ್ದು, ನಂತರದ ದಿನಗಳಲ್ಲಿ ಚದುರಿದ ಮಳೆಯಾಗಲಿದೆ.

ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಭಾಗದಲ್ಲಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ವರುಣನ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ಹವಾಮಾನ ಮುಂದುವರಿಯಲಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು (ಸೆಪ್ಟೆಂಬರ್ 29) ಮತ್ತು 30ರಂದು ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯ ಸಾಧ್ಯತೆಯಿದ್ದು, ಬೆಳಗಾವಿ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 12-20 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಧ್ಯಮ ಮಳೆಯ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ 3-6 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಚದುರಿದ ಮಳೆ ಮುಂದುವರಿಯಲಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
Share This Article