ವಿಜಯಪುರ, ಅಕ್ಟೋಬರ್ 16: ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮಿಜಿಗಳ ಅವಹೇಳನ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಅಸಂವಿಧಾನಿಕ ಆಶ್ಲೀಲ ಭಾಷೆ ಬಳಸಿದ ಆರೋಪದ ಹಿನ್ನಲೆ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಆದೇಶ ಹೊರಡಿಸಿದ್ದಾರೆ. ಆದೇಶದ ಅನ್ವಯ ಅಕ್ಟೋಬರ್ 16ರಿಂದ ಡಿಸೆಂಬರ್ 14ರ ವರೆಗೆ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಭೆಟಿ ನೀಡುವಂತಿಲ್ಲ.
ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಕನೇರಿ ಮಠದ ಶ್ರೀಗೆ 2 ತಿಂಗಳು ನಿರ್ಬಂಧ: ಡಿಸಿ ಆದೇಶ

ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಗಂಗಳುಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನ ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಲಿಲ್ಲ. ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು.