ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ: ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಕರೆ

Ravi Talawar
ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ: ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಕರೆ
WhatsApp Group Join Now
Telegram Group Join Now
ಬಳ್ಳಾರಿ,ಅ.31 ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯಾಂಗ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ‘ಜಾಗೃತಿ ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ’ ಎಂಬ ಘೋಷವಾಕ್ಯದೊಂದಿಗೆ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಜಾಗೃತಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಿ, ಅದನ್ನು ಬೇರು ಸಮೇತ ಕಿತ್ತು ಹಾಕಿ ನಿರ್ಮೂಲನೆ ಮಾಡುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಹಾಗಾಗಿ ಅ.27 ರಿಂದ ನ.02 ರ ವರೆಗೆ ಜಾಗೃತಿ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಜಾಗೃತ ಆಯೋಗ (ಸಿವಿಸಿ) ಭಾರತ ಸರ್ಕಾರದ ಒಂದು ಉನ್ನತ ಸಂಸ್ಥೆಯಾಗಿದ್ದು, ಇದು 1964ರಲ್ಲಿ ಸ್ಥಾಪಿತವಾದ ಸಂಸ್ಥೆಗೆ ಕರ್ನಾಟಕದ ನಿಟ್ಟೂರು ಶ್ರೀನಿವಾಸ ರಾವ್ ಅವರು ಮೊದಲ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದರು.
ಸಾರ್ವಜನಿಕ ಕ್ಷೇತ್ರದಲ್ಲಿ ಪ್ರಾಮಾಣಿಕತೆಗೆ ಉತ್ತೇಜನ ನೀಡುವುದು, ಭ್ರಷ್ಟಾಚಾರ ತಡೆಗಟ್ಟುವುದು, ಸರ್ಕಾರಿ ಕ್ಷೇತ್ರಗಳ ವ್ಯವಸ್ಥೆ ಸುಧಾರಣೆ, ಕೆಲಸದಲ್ಲಿ ಪಾರದರ್ಶಕತೆ, ಸರ್ಕಾರಿ ಅಧಿಕಾರಿಗಳ ಜವಾಬ್ದಾರಿತನ ಕ್ರಮ ಹೆಚ್ಚಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಾರ್ವಜನಿಕರಿಂದ ಯಾವುದೇ ಲಂಚ ಪಡೆಯದೇ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ಭ್ರಷ್ಟಾಚಾರ ಮುಕ್ತ ಮತ್ತು ನಶಾಮುಕ್ತ ಭಾರತವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಬಳಿಕ ನ್ಯಾಯಾಧೀಶರು ಜಾಗೃತಿ ಸಪ್ತಾಹ ಕಾರ್ಯಕ್ರಮ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಸಾಮಾನ್ಯ ಸಾರ್ವಜನಿಕರಿಗೆ ಕಾನೂನು-ನಿಯಮಗಳ ಕುರಿತು ಜಾಗೃತಿ ಮೂಡಿಸುವುದು. ಸರ್ಕಾರಿ ಸೌಲಭ್ಯ ಸೇವಾ ಕುರಿತು ಸಾಮಾನ್ಯ ಜನರಿಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದೇರೀತಿಯಾಗಿ ಆರ್ಥಿಕವಾಗಿ ದುರ್ಬಲ ಇರುವವರಿಗೆ ಉಚಿತವಾಗಿ ವಕೀಲರನ್ನು ನೇಮಿಸುವ ಮೂಲಕ ಉಚಿತ ಕಾನೂನು ಸೇವೆ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಮತ್ತು ವಕೀಲರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article