ಬೆಳಗಾವಿಏ.06: 25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆಯ ಕರ್ನಾಟಕದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದಾಗಿದೆ. ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅರಭಾವಿ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ ಕೌಜಲಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು ಎಂದು ಕರೆ ನೀಡಿದ
ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೆ, ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ ಎರಡು ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವರು ಟೀಕಿಸಿದರು. ಈಗಿನ ಬಿಜೆಪಿ ಅಭ್ಯರ್ಥಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ಹಾಗಾಗಿ ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಎಂದರು.
ಸ್ಥಳೀಯ ಸಮಸ್ಯೆಗಳನ್ನು ಸರಿಯಾಗಿ ಅರಿತಿರುವ ಮೃಣಾಲ್ ಹೆಬ್ಬಾಳ್ಕರ್, ನಿಮ್ಮ ಧ್ವನಿಯಾಗಿ ದೆಹಲಿಯಲ್ಲಿ ಕೆಲಸ ಮಾಡಲಿದ್ದಾನೆ. ಇನ್ನೂ ಯುವಕನಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಂತೆ ಬೆಳಗಾವಿ ಕ್ಷೇತ್ರಕ್ಕೆ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸುವಂತಾಗಬೇಕು ಎಂದರು.