ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮ : ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ

Pratibha Boi
ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮ : ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ
WhatsApp Group Join Now
Telegram Group Join Now
ಬೆಳಗಾವಿ :  ಗ್ರಾಮ ಪಂಚಾಯಿತಿಗಳಿಗೆ ನೂತನ ಕಟ್ಟಡ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತ್ ಕಾರ್ಯಾಲಯ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಹಕಾರದಿಂದ ಅನೇಕ ಕಡೆ ಗ್ರಾಮ ಪಂಚಾಯಿತಿಗಳಿಗೆ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ವಿಧಾನ ಪರಿಷತ್ ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಜೆಲ್ಲೆಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಲವಾರು ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸಲು ಸ್ಪಂದಿಸಲಾಗಿದೆ. ನನಗೆ ಮತ ನೀಡಿ ಆಯ್ಕೆ ಮಾಡಿದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ತಾವು ಮತ ಹಾಕಿದ್ದು ಸಾರ್ಥಕವಾಗಿದೆ ಎಂದುಕೊಳ್ಳುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್ ಸದಸ್ಯನಾದ ಮೇಲೆ ಕೆಳಮಟ್ಟದಲ್ಲಿನ ಸಮಸ್ಯೆಗಳನ್ನು ಅರಿತುಕೊಂಡು ಕೆಲಸ ಮಾಡಲು ಅವಕಾಶವಾಗಿದೆ. ಈವರೆಗೆ ಮಾಡಿದ ಕೆಲಸಗಳಲ್ಲದೆ ಇನ್ನು ಮುಂದೆ ಮಾಡಬೇಕಾದ ಕೆಲಸಗಳು ಬಹಳಷ್ಟಿವೆ. ಅವುಗಳ ಕುರಿತು ಸಮಗ್ರ ಯೋಜನೆ ಸಿದ್ಧಪಡಿಸಿ, ಸರಕಾರದಿಂದ ವಿಶೇಷ ಅನುದಾನ ತರಲು ಪ್ರಯತ್ನಿಸುತ್ತೇನೆ. ಜೊತೆಗೆ ಗ್ರಾಮ ಪಂಚಾಯಿತಿಗಳ ಅನುದಾನ ಹೆಚ್ಚಿಸುವಂತೆ ಸರಕಾರದ ಮೇಲೆ ಒತ್ತಡ ತರುತ್ತಿದ್ದೇನೆ ಎಂದು ಅವರು ವಿವರಿಸಿದರು.
ಈ ವೇಳೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ,  ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಮಾಸ್ತಮರ್ಡಿ, ಬಸರಿಕಟ್ಟಿ ಹಾಗೂ ಶೆಗಣಮಟ್ಟಿಯ ಹಿರಿಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article