ಮೃತಪಟ್ಟ ವ್ಯಕ್ತಿಯ ಸಾವಿಗೆ ಬುಲೆಟ್ ಗಾಯವೇ ನೇರ ಕಾರಣ : ಎಡಿಜಿಪಿ ಹಿತೇಂದ್ರ

Hasiru Kranti
ಮೃತಪಟ್ಟ ವ್ಯಕ್ತಿಯ ಸಾವಿಗೆ ಬುಲೆಟ್ ಗಾಯವೇ ನೇರ ಕಾರಣ : ಎಡಿಜಿಪಿ ಹಿತೇಂದ್ರ
WhatsApp Group Join Now
Telegram Group Join Now
ಬಳ್ಳಾರಿ:02. ನಗರದ ಹವಂಭಾವಿಯಲ್ಲಿ ನಿನ್ನೆ ನಡೆದ ಗುಂಪು ಘರ್ಷಣೆಯ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿಯ ಸಾವಿಗೆ ಬುಲೆಟ್ ಗಾಯವೇ ನೇರ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಎಡಿಜಿಪಿ ಹಿತೇಂದ್ರ ತಿಳಿಸಿದ್ದಾರೆ.
ಬಳ್ಳಾರಿ ನಗರಕ್ಕೆ ಭೇಟಿ ನೀಡಿದ್ದ ಎಡಿಜಿಪಿ ಹಿತೇಂದ್ರ ಅವರು, ಇಂದು ಎಸ್‌ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ಐದು ಖಾಸಗಿ ಗನ್‌ಮ್ಯಾನ್‌ಗಳ ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಸೀಜ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸುಮೋಟೋ ಪ್ರಕರಣ ದಾಖಲಿಸಲಾಗಿದೆ. ತನಿಖೆಯಲ್ಲಿ ಯಾವುದೇ ರೀತಿಯ ಸಡಿಲತೆ ಅಥವಾ ಲಘುವಾದ ನಿಲುವಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಸ್ಪಷ್ಟಪಡಿಸಿದರು. ಪ್ರಕರಣದ ಎಲ್ಲಾ ಆಯಾಮಗಳನ್ನೂ ಪರಿಶೀಲಿಸಿ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.
ಬ್ಯಾನರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಇಂತಹ ದುರ್ಘಟನೆ ಸಂಭವಿಸಿರುವುದು ದುಃಖಕರ ಎಂದು ವಿಷಾದ ವ್ಯಕ್ತಪಡಿಸಿದ ಎಡಿಜಿಪಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇದೇ ವೇಳೆ, ರಾಜಕೀಯ ಒತ್ತಡದಿಂದ ಬಳ್ಳಾರಿ ಎಸ್‌ಪಿ ಶೋಭಾರಾಣಿ ಅವರ ವರ್ಗಾವಣೆ ನಡೆದಿದೆ ಎಂಬ ಗಾಲಿ ಜನಾರ್ದನ ರೆಡ್ಡಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಶೋಭಾರಾಣಿ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದಿರುವ ಐದು ಗನ್‌ಗಳಲ್ಲಿ ಖಾಸಗಿ ಗನ್‌ಗಳೂ ಸೇರಿವೆ. ಎಲ್ಲಾ ಗನ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಬುಲೆಟ್ ಮ್ಯಾಚಿಂಗ್ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಹಿತೇಂದ್ರ ತಿಳಿಸಿದರು.
WhatsApp Group Join Now
Telegram Group Join Now
Share This Article