ಬೆಂಗಳೂರು: ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಆರೋಪದಡಿ ಶಿಕ್ಷಕರು -ವಿದ್ಯಾರ್ಥಿಗಳು ಸೇರಿದಂತೆ ಹಲವು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣವನ್ನು ಭೇದಿಸಿರುವ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು, ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೮ ಜನರನ್ನು ಬಂಧಿಸಿದ್ದಾರೆ.
ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಗಳ ವಿವಿಧ ಶಾಲೆಗಳ ಶಿಕ್ಷಕರನ್ನು ಬಂಧಿಸಿರುವ ಪೊಲೀಸರು. ಬಂಧಿತರಲ್ಲಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿಯ ಪೂರ್ವಭಾವಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಇತ್ತೀಚಿಗೆ ಪತ್ತೆಯಾಗಿತ್ತು. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆಯು ಯೂಟ್ಯೂಬ್ನಲ್ಲಿ ಹರಿದಾಡುತ್ತಿದ್ದುದು ಪತ್ತೆಯಾಗಿತ್ತು. ಸಮಾಜ ವಿಜ್ಞಾನ, ಇಂಗ್ಲಿಷ್, ಹಿಂದಿ ಪ್ರಶ್ನೆ ಪತ್ರಿಕೆಗಳು ಬೇರೆ ಬೇರೆ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ನೀಡಿದ ದೂರಿನನ್ವಯ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟಿತ್ತು ಹಾಗೂ ವೈರಲ್ ಮಾಡಲಾಗಿದ್ದ ಖಾತೆಗಳ ವಿವರ ಹಾಗೂ ಮಾಹಿತಿಗಳನ್ನು ಆಧರಿಸಿ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಕೆಲವು ಮಾಹಿತಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇದರಲ್ಲಿ ಯಾರ ಪಾತ್ರ ಏನು ಎಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನು ಆನ್ಲೈನ್ನಲ್ಲಿ ಹಂಚಿಕೊಂಡಿರುವವರೂ ಸಹ ಈ ಪ್ರಕರಣದಲ್ಲಿ ಹೊಣೆಗಾರರಾಗುತ್ತಾರೆ. ಅವರನ್ನೂ ಸಹ ಪತ್ತೆಹಚ್ಚಿ, ಅವರ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಬಂಧಿತರ ಪೈಕಿ ಕಲಬುರಗಿ ಜಿಲ್ಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್, ಸಹ ಶಿಕ್ಷಕಿ ಫಾಹ್ಮಿದಾ ಹಾಗೂ ಶಿಕ್ಷಕಿ ಫರ್ಜಾನಾ ಬೇಗಂ ಇದ್ದಾರೆ ಎಂದು ತಿಳಿದುಬಂದಿದೆ. ಇವರ ಜೊತೆಗೆ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನೂ ಸಹ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದಾರೆ ಎನ್ನಲಾಗಿದೆ.
ಎಸ್ಎಸಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ವಿವರ
- ವಿ.ಡಿ. ಗಿರೀಶ್ – ಮುಖ್ಯೋಪಾಧ್ಯಾಯ, ತುಮಕೂರು
- ಅಮ್ಜದ್ ಖಾನ್ – ಸಹ ಶಿಕ್ಷಕ, ರಾಮನಗರ
- ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ, ಕಲಬುರಗಿ
- ಫಾಹ್ಮಿದಾ – ಸಹ ಶಿಕ್ಷಕಿ, ಕಲಬುರಗಿ
- ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ, ಕಲಬುರಗಿ
- ಫರ್ಜಾನಾ ಬೇಗಂ – ಶಿಕ್ಷಕಿ, ಕಲಬುರಗಿ
- ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು
ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ, ಇನ್ನಿತರರು ಶಾಮೀಲಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಈ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ.
2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. 2026ರ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ 1ರ ಎಕ್ಸಾಮ್ಸ್ ನಡೆಯಲಿವೆ.
ಪಿಯುಸಿ ಪರೀಕ್ಷೆ 1ರ ಪರೀಕ್ಷೆ 2026ರ ಫೆಬ್ರುವರಿ 28ರಿಂದ ಮಾರ್ಚ್ 17ರ ವರೆಗೆ ನಡೆದರೆ, ಪರೀಕ್ಷೆ 2ರ ಪರೀಕ್ಷೆ ಏಪ್ರಿಲ್ 25ರಿಂದ ಮೇ 9ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.


