ನವದೆಹಲಿ, ಫೆ. 05;-ದೇಶದ 15 ನೇ ಹಣಕಾಸು ಆಯೋಗ ಮತ್ತು ಇತರೆ ಯೋಜನೆಗಳ ಅಡಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬಾಕಿ ಇರುವ 10,175 ಕೋಟಿ ರೂಪಾಯಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸೀರ್ ಹುಸೇನ್ ಅವರು ಆಗ್ರಹಿಸಿದ್ದಾರೆ.
ಸಂಸತ್ತಿನ ಶೂನ್ಯವೇಳೆಯಲ್ಲಿ ಬುಧವಾರ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದ ಅವರು, ಕರ್ನಾಟಕದ 6,000 ಗ್ರಾಮ ಪಂಚಾಯಿತಿಗಳಿಗೆ 2,133 ಕೋಟಿ ರೂಪಾಯಿಗೂ ಅಧಿಕ ಹಣದ ಬಾಕಿ ಇದೆ. ಕೇಂದ್ರ ಸರ್ಕಾರ ಕರ್ನಾಕಟ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಬಿಡುಗಡೆ ಮಾಡಬೇಕಾಗಿರುವ ಮೊದಲ ಕಂತಿನ 1,092 ಕೋಟಿ ಹಣದ ಅನುದಾನವೂ ಬಿಡುಗಡೆ ಆಗಿಲ್ಲ. ಕರ್ನಾಟಕಕ್ಕೆ ಬಿಡುಗಡೆ ಆಗಬೇಕಿದ್ದ ಹಣವನ್ನು ಬಿಡುಗೆ ಮಾಡುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಕಾರಣ ಕರ್ನಾಟಕದ ಗ್ರಾಮ ಪಂಚಾಯಿತಿಗಳು ಕೇಂದ್ರ ಸರ್ಕಾರದ ನಿಧಿಯ ನಿರೀಕ್ಷೆಯಲ್ಲಿದ್ದು, ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕರ್ನಾಟಕಕ್ಕೆ 1,066 ಕೋಟಿ ರು.ಗಳು ಹಾಗೂ ಜಲಜೀವನ ಯೋಜನೆ ಅಡಿಯಲ್ಲಿ ರೂಪಾಯಿ 6,976 ಕೋಟಿ ಬಾಕಿ ಇದೆ. 15ನೇ ಹಣಕಾಸು ಆಯೋಗವನ್ನು ವಿಶೇಷವಾಗಿ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಗ್ರಾಮ ಪಂಚಾಯತಿಗಳಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶದಿಂದ ರಚಿಸಲಾಗಿದೆ. ಆದರೆ, ಈ ಉದ್ದೇಶವನ್ನು ಈಡೇರಿಸುವಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ಧಾರೆ.


