ಬಳ್ಳಾರಿ,ಫೆ.10.. ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ಮತ್ತು 371 (ಜೆ) ಪ್ರಮಾಣ ಪತ್ರಗಳನ್ನು ವಿತರಣೆ ಮಾಡುವ ವಿನೂತನ ಕಾರ್ಯಕ್ರಮ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯಲ್ಲಿಯೇ ಜಾತಿ ಪ್ರಮಾಣ ಪತ್ರ ಹಾಗೂ 371 (ಜೆ) ಪ್ರಮಾಣ ಪತ್ರಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಲು ತಮ್ಮ ಪೋಷಕರ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸ ಪ್ರಮಾಣ ಪತ್ರ ಹಾಗೂ ಇತರೆ ಸಂಬAಧಿತ ದಾಖಲೆಗಳನ್ನು ತಮ್ಮ ತಮ್ಮ ಶಾಲೆ, ಕಾಲೇಜಿಗೆ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ. ದಾಖಲೆಗಳ ಪರಿಶೀಲನೆಯ ನಂತರ ಪ್ರಮಾಣ ಪತ್ರಗಳನ್ನು ತ್ವರಿತವಾಗಿ ಶಾಲೆ ಮತ್ತು ಕಾಲೇಜುಗಳಲ್ಲೇ ವಿತರಿಸಲಾಗುವುದು.
ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳ ಪೋಷಕರು ಕಚೇರಿಗಳಿಗೆ ಸುತ್ತಾಟವಿಲ್ಲದೆ, ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾಸಂಸ್ಥೆಯಲ್ಲಿಯೇ ಪ್ರಮಾಣ ಪತ್ರಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಸಂಬAಧಿತ ಶಾಲೆ ಹಾಗೂ ಕಾಲೇಜುಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಆಡಳಿತ ಮಂಡಳಿಗಳು ಈ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ : ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮ


