ವಿಪತ್ತು ಸಂದರ್ಭಗಳಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

MK HasiruKranti
ವಿಪತ್ತು ಸಂದರ್ಭಗಳಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
WhatsApp Group Join Now
Telegram Group Join Now
ಸಾಣಾಪೂರ ಕೆರೆಯಲ್ಲಿ ಎನ್.ಡಿ.ಆರ್.ಎಫ್ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ
ಕೊಪ್ಪಳ ಮಾ., 26 : ಸಂಭವನೀಯ ಅತೀವೃಷ್ಟಿ, ಅನಾವೃಷ್ಟಿ, ಪ್ರವಾಹ, ನೈಸರ್ಗಿಕ ವಿಪತ್ತು ಸಂದರ್ಭಗಳಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪೂರ ಕೆರೆ ವ್ಯಾಪ್ತಿ ಪ್ರದೇಶದಲ್ಲಿ ಎನ್.ಡಿ.ಆರ್.ಎಫ್ ತಂಡ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಗ್ನಿಶಾಮಕ ಇಲಾಖೆ ಹಾಗೂ ಇತರೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಾಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಾವುದೇ ವಿಕೋಪ ಸಂದರ್ಭದಲ್ಲಿ ಮುಂಜಾಗ್ರತೆ ವಹಿಸಿದರೆ ಸಾವಿರಾರು ಜನರ ಜೀವಗಳು ಉಳಿಯುತ್ತವೆ. ಹಾಗಾಗಿ ವಿಪತ್ತು ಸಂದರ್ಭಗಳಲ್ಲಿ ಸ್ಥಳೀಯ ಆಡಳಿತ, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ತಮ್ಮ ಪಾತ್ರವನ್ನು ಅರ್ಥೈಸಿಕೊಳ್ಳುವುದೊಂದಿಗೆ ವಿಪತ್ತು ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ವಹಿಸುವುದು ತುಂಬಾ ಅತ್ಯವಶ್ಯಕವಾಗಿದೆ ಮತ್ತು ಇದು ಎಲ್ಲರ ಆದ್ಯ ಕರ್ತವ್ಯವೂ ಸಹ ಆಗಿದೆ. ಈ ಉದ್ದೇಶದಿಂದ ಪ್ರಸಕ್ತ ಸಾಲಿನ ಸಂಭವನೀಯ ಅತೀವೃಷ್ಟಿ, ಪ್ರವಾಹದಿಂದ ಹಾನಿಗೊಳಗಾಗುವ ಪ್ರದೇಶಗಳಲ್ಲಿ ನೈಸರ್ಗಿಕ ವಿಪತ್ತು ಸಮಯದಲ್ಲಿ ಸಂಭವಿಸಬಹುದಾದ ಹಾನಿಯಿಂದ ಜನರು ರಕ್ಷಣೆ ಪಡೆಯುವುದು ಹೇಗೆ ಎಂಬುವುದರ ಕುರಿತಾಗಿ ಎನ್.ಡಿ.ಆರ್.ಎಫ್ ತಂಡದಿಂದ ಅಣುಕು ಪ್ರದರ್ಶನದ ಮೂಲಕ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ಪ್ರವಾಹ, ಅಗ್ನಿ ಅವಘಡ, ಗ್ಯಾಸ್ ಸಿಲಿಂಡರ್ ಸ್ಪೋಟ ಸೇರಿದಂತೆ ಇತರೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿಯನ್ನು ಎಲ್ಲರೂ ಸರಿಯಾಗಿ ತಿಳಿದುಕೊಂಡು ಇದನ್ನು ತಮ್ಮ ಅಕ್ಕ-ಪಕ್ಕದವರಿಗೂ ತಿಳಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಪತ್ತು ನಿರ್ವಹಣೆಯ ಸಲುವಾಗಿ ವಿವಿಧ ತರಬೇತಿ ಕಾರ್ಯಗಳನ್ನು ಕಾಲಾನುಕ್ರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿಪತ್ತನ್ನು ಎದುರಿಸಲು ಜಿಲ್ಲಾ ಪೊಲೀಸ್ ಸದಾ ಸಿದ್ದವಾಗಿದೆ ಮತ್ತು ಸರ್ವ ರೀತಿಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಕ್ಷಮತೆಯನ್ನು ನಮ್ಮ ಇಲಾಖೆ ಹೊಂದಿದೆ ಎಂದು ಹೇಳಿದರು.
ಎನ್.ಡಿ.ಆರ್.ಎಫ್ ಡೆಪ್ಯುಟಿ ಕಮಾಂಡೆಂಟ್ ಅಖೀಲ್ ಕುಮಾರ್ ಚೌಬೆ ಅವರು ಮಾತನಾಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡವು ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ಆಗಮಿಸಿ ಅಲ್ಲಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡುತ್ತಿದೆ. ಸಂಭವನೀಯ ಅತೀವೃಷ್ಟಿ, ಅನಾವೃಷ್ಟಿ, ಪ್ರವಾಹ, ನೈಸರ್ಗಿಕ ವಿಪತ್ತು ಉಂಟಾಗಬಹುದಾಗ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಅಣುಕು ಪ್ರದರ್ಶನ ಮೂಲಕ ಪ್ರಕೃತಿ ವಿಕೋಪ, ಮಾನವ ನಿರ್ಮಿತ ವಿಕೋಪ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರು ಯಾವ ರೀತಿ ಮುಂಜಾಗೃತೆ ಕ್ರಮ ಕೈಗೊಳ್ಳಬೇಕು ಮತ್ತು ಇದರ ಜೊತೆಗೆ ರಕ್ತಶ್ರಾವ ತಡೆಗಟ್ಟುವ ಬಗ್ಗೆ, ಹೃದಯಘಾತ ಸಂದರ್ಭದಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮ, ಗಂಟಲಿನಲ್ಲಿ ಸಿಕ್ಕಿಕೊಂಡ ವಸ್ತುಗಳ ಹೊರ ತಗೆಯುವುಕೆ (ಎಫ್.ಪಿ.ಎ.ಓ), ಹಾವು ಮತ್ತು ಇತರೆ ಪ್ರಾಣಿ ಕಡಿತದಿಂದ ಯಾವ ರೀತಿ ರಕ್ಷಣೆ ಮಾಡಿಕೊಳ್ಳಬೇಕೆಂಬುವುದು ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ಎನ್‌ಡಿಆರ್‌ಎಫ್ ತಂಡದ ಸದಸ್ಯರು ಅಪಘಾತ, ಹೃದಯಾಘಾತ, ಭೂಕಂಪ, ಗುಡುಗು ಮತ್ತು ಸಿಡಿಲು, ಪ್ರವಾಹ, ಅಗ್ನಿ ಅವಘಡ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಅಣುಕು ಪ್ರದರ್ಶನವನ್ನು ಸಾರ್ವಜನಿಕರು ಹಾಗೂ ಶಾಲಾ-ಕಾಲೇಜುಗಳ ಮಕ್ಕಳಿಗೆ ಸವಿವರವಾದ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ ಎನ್.ಡಿ.ಆರ್.ಎಫ್ ತಂಡದ ವಿಪತ್ತು ನಿರ್ವಾಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮದ ನೇತೃತ್ವವನ್ನು ಕೊಪ್ಪಳ ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಮಪ್ಪ, ಗಂಗಾವತಿ ತಹಶೀಲ್ದಾರ ವಿಶ್ವನಾಥ ಮುರಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಸೇರಿದಂತೆ ಗಂಗಾವತಿ ತಾಲ್ಲೂಕು ಪಂಚಾಯತ್, ಸಾಣಾಪೂರ ಗ್ರಾ.ಪಂ ಮತ್ತು ಇತರೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article