ದೇಶಕ್ಕೆ ಆಹಾರ ಭದ್ರತೆ, ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಪಾತ್ರ ಅವಿಸ್ಮರಣೀಯ : ಮೇಯರ್ ಪಿ.ಗಾದೆಪ್ಪ

MK HasiruKranti
ದೇಶಕ್ಕೆ ಆಹಾರ ಭದ್ರತೆ, ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಪಾತ್ರ ಅವಿಸ್ಮರಣೀಯ : ಮೇಯರ್ ಪಿ.ಗಾದೆಪ್ಪ
WhatsApp Group Join Now
Telegram Group Join Now
ಬಳ್ಳಾರಿ,ಏ.06
ದೇಶಕ್ಕೆ ಆಹಾರ ಭದ್ರತೆ ಒದಗಿಸುವಲ್ಲಿ ಮತ್ತು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಪಾತ್ರ ಅವಿಸ್ಮರಣೀಯ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನರಾಮ್ ಅವರು 119ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶವು ಇಂದು ಆಹಾರ ಭದ್ರತೆಯಲ್ಲಿ ಸ್ವಾವಲಂಬನೆ ಸಾಧಿಸಲು ಅಂದಿನ ದಿನಗಳಲ್ಲಿ ದೇಶದ ಧೀಮಂತ ನಾಯಕ, ಮಾಜಿ ಉಪಪ್ರಧಾನಿ ಹಾಗೂ ಭಾರತದ ಹಸಿರು ಕ್ರಾಂತಿಯ ಮೂಲ ಪುರುಷ ಡಾ.ಬಾಬು ಜಗಜೀವನರಾಮ್ ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ ಎಂದು ಸ್ಮರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಭಾರತವು ಆಹಾರಕ್ಕಾಗಿ ಅಮೆರಿಕದ ಮೇಲೆ ಅವಲಂಬಿತವಾಗಿದ್ದ ಕಾಲದಲ್ಲಿ, ಕೃಷಿ ಸಚಿವರಾಗಿ ಬಾಬೂಜಿಯವರು ತಂದ ಹೊಸ ತಂತ್ರಜ್ಞಾನ ಮತ್ತು ಹಸಿರು ಕ್ರಾಂತಿ ದೇಶಕ್ಕೆ ಆಹಾರ ಸ್ವಾವಲಂಬನೆಯನ್ನು ತಂದುಕೊಟ್ಟಿತು. ಅಂದಿನಿAದ ಇಂದಿನವರೆಗೆ ದೇಶದಲ್ಲಿ ಆಹಾರ ಉತ್ಪಾದನೆಯ ಕೊರತೆಯಾಗಿಲ್ಲ ಎಂಬುದು ಗಮನಾರ್ಹವಾಗಿದೆ ಎಂದು ಹೇಳಿದರು.
ಡಾ.ಬಾಬು ಜಗಜೀವನರಾಮ್ ಅವರ ಜೀವನಶೈಲಿಯು ಇಂದಿನ ‘ಸುಸ್ಥಿರ ಅಭಿವೃದ್ಧಿ’ ಕಲ್ಪನೆಗೆ ಮಾದರಿಯಾಗಿದೆ. ಸತ್ಯ, ಪ್ರಾಮಾಣಿಕತೆ ಮತ್ತು ಸಮಾನತೆಯ ಬಗ್ಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ದೇಶದ ಇಬ್ಬರು ಮಹಾನ್ ನಾಯಕರಾದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರನ್ನು ಭಾರತದ ಎರಡು ಕಣ್ಣುಗಳಿದ್ದಂತೆ, ಅವರ ದಾರಿಯಲ್ಲಿ ನಡೆಯುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಬಾಬು ಜಗಜೀವನ್ ರಾಮ್ ಅವರು ವಿದ್ಯಾರ್ಥಿಯಾಗಿದ್ದಾಗ ಗಣಿತ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆಯುವ ಮೂಲಕ ಶ್ರದ್ಧೆಯಿಂದ ವ್ಯಾಸಂಗ ಮಾಡುತ್ತಿದ್ದರು. ಅವರ ಈ ಪ್ರತಿಭೆ ಮತ್ತು ಪರಿಶ್ರಮ ಇಂದಿನ ವಿದ್ಯಾರ್ಥಿಗಳಿಗೆ ದೊಡ್ಡ ಮಾದರಿಯಾಗಬೇಕು ಎಂದರು.
ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿ ಡಾ.ಶ್ರೀನಿವಾಸಮೂರ್ತಿ ಎಂ. ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿ, ಡಾ.ಬಾಬು ಜಗಜೀವನ್ ರಾಮ್ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರೊಂದಿಗೆ ಸಂವಿಧಾನ ರಚನಾ ಸಮಿತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಬಾಬು ಜಗಜೀವನ್ ರಾಮ್ ಅವರು ಯುದ್ಧದಿಂದ ಆಗುವ ಅನಾಹುತಗಳ ಬಗ್ಗೆ ದೂರದೃಷ್ಟಿಯನ್ನು ಹೊಂದಿದ್ದರು ಎಂದು ತಿಳಿಸಿದರು.
ಬಾಬು ಜಗಜೀವನ್ ರಾಮ್ ಅವರು ತಮ್ಮ 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಒಂದೇ ಒಂದು ಚುನಾವಣೆಯಲ್ಲೂ ಸೋಲನ್ನು ಕಾಣದ ಏಕೈಕ ಮಹಾನ್ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸುದೀರ್ಘ ರಾಜಕೀಯ ಪಯಣ ಮತ್ತು ದೇಶಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ ಎಂದು ಸ್ಮರಿಸಿದರು.
ಲೋಕಸಭೆಯಲ್ಲಿ ದಲಿತ ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸಿದ ಅವರು, ದೇಶದ ರಾಜಕಾರಣದಲ್ಲಿ ದಲಿತರಿಗೆ ಸಿಗಬೇಕಾದ ಹಕ್ಕನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಾಬುಜಿಯವರ ವ್ಯಕ್ತಿತ್ವವನ್ನು ಬೇರೆ ಯಾರೊಂದಿಗೂ ಹೋಲಿಸಬಾರದು; ಅವರೊಬ್ಬ ಅಪ್ರತಿಮ ವಿಶ್ವ ನಾಯಕ ಎಂದು ಬಣ್ಣಿಸಿದರು.
1971 ರ ಯುದ್ಧದ ಸಮಯದಲ್ಲಿ ಅವರು ರಕ್ಷಣಾ ಸಚಿವರಾಗಿ ತೆಗೆದುಕೊಂಡ ನಿರ್ಧಾರಗಳು ಭಾರತದ ಸಾರ್ವಭೌಮತ್ವವನ್ನು ಎತ್ತಿ ಹಿಡಿದವು. ಇಂದಿರಾ ಗಾಂಧಿಯವರನ್ನು ಪ್ರಧಾನಮಂತ್ರಿಯಾಗಿ ಮಾಡುವಲ್ಲಿ ಮತ್ತು ಆ ಕಾಲದ ರಾಜಕೀಯ ಬಿಕ್ಕಟ್ಟುಗಳನ್ನು ನಿಭಾಯಿಸುವಲ್ಲಿ ಅವರ ಪಾತ್ರ ಅತ್ಯಂತ ದೊಡ್ಡದಾಗಿತ್ತು ಎಂದು ತಿಳಿಸಿದರು.
ಬಿಹಾರದ ಚಾಂದ್ವಾ ಗ್ರಾಮದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಡಾ.ಬಾಬು ಜಗಜೀವನ್ ರಾಮ್ ಅವರು ಅವರು, ತಂದೆ ಶೋಭಿ ರಾಮ್ ಮತ್ತು ತಾಯಿ ವಾಸಂತಿ ದೇವಿ ಅವರ ಮಾರ್ಗದರ್ಶನದಲ್ಲಿ ಬೆಳೆದು, ಸಂತ ರವಿದಾಸರ ಮತ್ತು ಸಂತ ಶಿವನಾರಾಯಣ ಪಂಥದ ಪ್ರಭಾವದಿಂದ ಸಾತ್ವಿಕ ಗುಣ ಮತ್ತು ಸಜ್ಜನಿಕೆಯನ್ನು ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದಿದ್ದರು ಎಂದು ವಿವರಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಸಂವಿಧಾನ ಪ್ರಸ್ತಾವನೆ ಬೋಧಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಡಾ.ಬಾಬು ಜಗಜೀವನರಾಮ್ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಪಂಪಾಪತಿ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ನವೀನ್ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಸತಿ ನಿಲಯದ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜಯಂತಿಯ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
*ಸಂಭ್ರಮದ ಮೆರವಣಿಗೆ:*
ಡಾ.ಬಾಬು ಜಗಜೀವನ್ ರಾಮ್ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿ ಮೆರಗು ನೀಡಿದವು.
ಮೆರವಣಿಗೆಗೆ ಮುನ್ನ ನಗರದ ನಲ್ಲಚೇರುವು ಪ್ರದೇಶದ ಡಾ.ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.
*ಆಕರ್ಷಕ ಸ್ತಬ್ಧಚಿತ್ರ:*
ಮೆರವಣಿಗೆಯಲ್ಲಿ ಸಾರಿಗೆ ಇಲಾಖೆ ವತಿಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು.
ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ  ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೆಯ ಬ್ರೂಸ್ ಪೇಟೆ ಪೋಲಿಸ್ ಠಾಣೆ ಮುಂಭಾಗ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊAಡಿತು.
WhatsApp Group Join Now
Telegram Group Join Now
Share This Article