ಬಳ್ಳಾರಿ: 07..ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ ಇರುವ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿ ಬಳ್ಳಾರಿ ಜಿಲ್ಲಾ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ನಗರೂರು ನಾರಾಯಣರಾವ್ ಉದ್ಯಾನವನದಿಂದ ಆರಂಭಗೊಂಡ ಮೆರವಣಿಗೆಯು ಗಡಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತರಳಿತು.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ 12 ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತದೆ. ಅದೇ ರೀತಿ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅಂದಿನ ಗವಿಯೂ ಅಲ್ಲಿ ಅಸ್ತಿತ್ವದಲ್ಲಿದೆ. ಆದರೆ, ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಪಂಚಕಮಿಟಿಯವರು ಅಕ್ರಮವಾಗಿ ಹಸ್ತಕ್ಷೇಪ ಮಾಡಿ, ಅನ್ನ ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಖಂಡನೀಯ. ಇದರಿಂದ ಶಿವಶರಣ ಹಡಪದ ಅಪ್ಪಣ್ಣನವರಿಗೆ ಮತ್ತು ಹಡಪದ ಸಮುದಾಯದ ಭಕ್ತಿಭಾವನೆಗಳಿಗೆ ತೀವ್ರ ಅನ್ಯಾಯವಾಗಿದ್ದು, ಇತಿಹಾಸದ ಮೌಲ್ಯ ಕುಗ್ಗುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹಡಪದ ಅಪ್ಪಣ್ಣನವರ ವಂಶಸ್ಥರು ಮತ್ತು ಸಮಾಜದ ಭಕ್ತರಾದ ನಾವು, ನಮ್ಮ ಶರಣರ ಇತಿಹಾಸ ಹಾಗೂ ಅರಿವಿನ ಗವಿಯನ್ನು ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಘಟನೆ ನಮ್ಮ ಭಾವನೆಗಳಿಗೆ ಗಂಭೀರ ಧಕ್ಕೆ ಉಂಟುಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಘಟನೆ ಸಂಬಂಧ ಈಗಾಗಲೇ ಸಮಾಜದ ಮುಖಂಡರು, ಭಕ್ತರು ಹಲವು ಪ್ರತಿಭಟನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಅನೇಕ ಮಠಾಧೀಶರು ಹಾಗೂ ನಾಯಕರು ಸಹ ಹಡಪದ ಅಪ್ಪಣ್ಣನವರ ಪರವಾಗಿ ಹೋರಾಟ ನಡೆಸಿದರೂ ಇನ್ನೂ ನ್ಯಾಯ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಈ ಅಲ್ರಮ ಕೃತ್ಯದಲ್ಲಿ ಭಾಗಿಯಾಗಿರುವ ಪಂಚಕಮಿಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅದನ್ನು ಯಥಾ ಸ್ಥಿತಿಗೆ ತರಬೇಕು. ಹಾಗೆಯೇ ಹಡಪದ ಅಪ್ಪಣ್ಣ ನವರ ಅರಿವಿನ ಗವಿಯಲ್ಲಿ ಅವರ ಮೂರ್ತಿಯನ್ನು ಪುನಃ ಪ್ರತಿಷ್ಠಾಪನೆ ಮಾಡಿ, ಆ ಸ್ಥಳವನ್ನು ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಸಮರ್ಪಕವಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೇಯಲ್ಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್. ಶಶಿಕುಮಾರ್, ಜಿಲ್ಲಾಧ್ಯಕ್ಷ ಹೆಚ್. ರುದ್ರಪ್ಪ, ಜಿಲ್ಲಾ ಸಂಚಾಲಕ ಹೆಚ್. ಅಮರೇಶ್, ಬಳ್ಳಾರಿ ತಾಲೂಕು ಅಧ್ಯಕ್ಷ ಕೆ.ಕೆ.ಹಾಳ್ ಹೆಚ್. ಶಿವರಾಜ್, ಕೆ.ಕೆ.ಹಾಳ್ ಹೆಚ್. ಸದಾಶಿವ, ತಾಲೂಕು ಗೌರವ ಅಧ್ಯಕ್ಷ ತಿಪ್ಪೇರುದ್ರ ಹಂದಿಹಾಳ್, ಉಪಾಧ್ಯಕ್ಷರಾದ ಚೊಳರಾಜ,ಸಂತೋಷಕುಮಾರ
ಪ್ರದಾನ ಕಾರ್ಯದರ್ಶಿ ವೀರಭದ್ರ ಸಿಂದುವಾಳ,
ಸಂಘಟನಾ ಕಾರ್ಯದರ್ಶಿ ಮರಿಸ್ವಾಮಿ ಸೋಮಸಮುದ್ರ, ಜಿಲ್ಲಾ ಖಜಾಂಚಿ ಮಂಜುನಾಥ, ನಾಗರಾಜ.ಹೆಚ್,
ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೊಡ್ಡಬಸಪ್ಪ ವಣೇನೂರು, ಯರಗುಡಿ ಮಂಜುನಾಥ ಸೇರಿದಂತೆ ಸಮಾಜದ ಮಹಿಳೆಯರು ಭಾಗವಹಿಸಿದ್ದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದಿದ್ದ ತಮ್ಮ ಬೇಡಿಲೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿ ಸಲ್ಲಿಸಿದರು.


