ಬೆಂಗಳೂರು02: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.
ಸಂಸದ ಪ್ರಜ್ವಲ್ ಹಾಗೂ ಎಚ್.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.
ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. ಎಸ್ಐಟಿ ನೀಡಿದ ಲುಕ್ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ರೇವಣ್ಣ ಪತ್ತೆಯಾಗದಿದ್ದರೆ, ಅವರ ಪತ್ತೆಗೆ ಕೋರ್ಟ್ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.