ಬೆಂಗಳೂರು, ಮೇ 9: ಕಾಲೇಜು ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಪದವಿ ಆನರ್ಸ್ ಅಧ್ಯಯನಕ್ಕೆ 2024-25ನೇ ಶೈಕ್ಷಣಿಕ ವರ್ಷದಿಂದ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಇದರೊಂದಿಗೆ, ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಅಳವಡಿಸಿಕೊಳ್ಳುವುದಕ್ಕಿಂತಲೂ ಮೊದಲು, ಅಂದರೆ 2021-22 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಸಾಂಪ್ರದಾಯಿಕ ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಕರ್ನಾಟಕ ಮರಳಿದಂತಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿತ್ತು. ಆದರೆ, ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು.
ಉನ್ನತ ಶಿಕ್ಷಣ ಇಲಾಖೆ ಹೇಳುವುದೇನು?
ಇದೀಗ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಇಲಾಖೆ, ಎಸ್ಇಪಿ ಆಯೋಗದ ವಿಸ್ತೃತ ಸಮಾಲೋಚನೆಯನ್ನು ಆಧರಿಸಿದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಐತಿಹಾಸಿಕ ಅನುಭವ, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವಿವಿಧ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ನೀಡುವುದನ್ನು ಗಮನದಲ್ಲಿಟ್ಟುಕೊಂಡು ಎಸ್ಇಪಿ ಆಯೋಗ ಶಿಫಾರಸುಗಳ್ನು ಮಾಡಿದೆ ಎಂದು ಇಲಾಖೆ ಹೇಳಿದೆ.