ಕಾವೇರಿದ ಪರಿಷತ್ ಚುನಾವಣಾ ಕಣ: ಕೈ ಅಭ್ಯರ್ಥಿಗಳ ಬಿರುಸಿನ ಪ್ರಚಾರ

Ravi Talawar
ಕಾವೇರಿದ ಪರಿಷತ್ ಚುನಾವಣಾ ಕಣ: ಕೈ ಅಭ್ಯರ್ಥಿಗಳ ಬಿರುಸಿನ ಪ್ರಚಾರ
WhatsApp Group Join Now
Telegram Group Join Now

ಬೆಂಗಳೂರು,11: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪರಿಷತ್ ಚುನಾವಣೆ ಕಾವು ಪಡೆದಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ತನ್ನ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಜೂನ್​ 3ರಂದು ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೇ 10ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮೇ 16 ಆಗಿದೆ. ನಾಮಪತ್ರ ಪರಿಶೀಲನೆ ಮೇ 17ಕ್ಕೆ ನಡೆಯಲಿದೆ. ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್ ಪಕ್ಷ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಐವರು ಕೈ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರು. ಅದರಂತೆ ಕಾಂಗ್ರೆಸ್ ನಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ಆಗ್ನೇಯ ಶಿಕ್ಷಕ ಕ್ಷೇತ್ರದಿಂದ ಕೆ. ಬಿ. ಶ್ರೀನಿವಾಸ್‌, ನೈಋತ್ಯ ಶಿಕ್ಷಕ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್‌ ಹೆಸರು ಘೋಷಿಸಲಾಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಬ್ಬಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮರಿತಿಬ್ಬೇಗೌಡ ಅಭ್ಯರ್ಥಿಯಾಗಿರಲಿದ್ದಾರೆ. ಹೀಗಾಗಿ ಕೈ ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನು ಆರಂಭಿಸಿ, ಬಿಜೆಪಿ-ಜೆಡಿಎಸ್ ನಿಂದ ಒಂದು ಹೆಜ್ಜೆ ಮುಂದಿದ್ದಾರೆ.

WhatsApp Group Join Now
Telegram Group Join Now
Share This Article