ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ: ಐವರ ಸ್ಥಿತಿ ಗಂಭೀರ

Ravi Talawar
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ: ಐವರ ಸ್ಥಿತಿ ಗಂಭೀರ
WhatsApp Group Join Now
Telegram Group Join Now

ಬೆಳಗಾವಿ,22: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಹೂಲಿಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ದೇವಿ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿಯನ್ನು ಇವರು ಸೇವಿಸಿದ್ದರು. ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಬುಧವಾರ ಏಕಾಏಕಿ ವಾಂತಿ, ಭೇದಿ ಶುರುವಾಗಿದೆ. ಕೂಡಲೇ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಹೂಲಿಕಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯವನ್ನೂ ತಾಲೂಕು ವೈದ್ಯರು ತಪಾಸಣೆ ಮಾಡುತ್ತಿದ್ದಾರೆ.

 ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಮಾಹಿತಿ ನೀಡಿದ್ದು, ”ಈವರೆಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಸಾದ ಸೇವಿಸಿದವರಲ್ಲಿ ವಾಂತಿ, ಭೇದಿ ಕಂಡುಬಂದ ತಕ್ಷಣವೇ ಎಲ್ಲರಿಗೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿ ಗಂಟೆಗೂ ರೋಗಿಗಳ ಮಾನಿಟರ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ‌ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ” ಎಂದು‌ ತಿಳಿಸಿದರು.

 ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ವಿಶ್ವಾಸ ವೈದ್ಯ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ದಿನದ 24 ಗಂಟೆಗಳವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನೀಡಬೇಕು. ರೋಗಿಗಳ ಪ್ರಕರಣ ಹೆಚ್ಚಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಸ್ಥಳೀಯವಾಗಿ ಔಷಧೋಪಚಾರ ಪಡೆದವರಿಗೂ ಎಲ್ಲ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು.

 

WhatsApp Group Join Now
Telegram Group Join Now
Share This Article