ಗದಗ ,ಮೇ.23 : ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲೆಯ ಡಿ.ಸಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಗಳಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ “ಕೃಷ್ಣಾ” ದಿಂದ ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಡಿ.ಸಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಡಿ.ಸಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಇದರ ಮೇಲುಸ್ತುವಾರಿ ವಹಿಸಬೇಕು ಎಂದರು.
ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಟಿದೆ. ಆದರೆ ಜಿಲ್ಲಾ, ತಾಲೂಕಿಗೆ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ರೂಪಿಸಿ ವಿತರಣೆಗೆ ಕ್ರಮ ಕೈಗೊಳ್ಳಬೇಕು . ಈ ಕುರಿತು ರೈತರಿಂದ ದೂರು ಬಾರದಂತೆ ನೋಡಿಕೊಳ್ಳಬೇಕು. ಹಾವೇರಿಯಲ್ಲಿ ಬಿತ್ತನೆ ಬೀಜಕ್ಕೆ ಜನ ಕ್ಯೂ ನಿಂತಿರುವುದು ಮಾಧ್ಯಮ ಮುಖಾಂತರ ತಿಳಿದುಬಂದಿದೆ. ಈ ರೀತಿ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನ ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕೆಂದು. ನೀರು ಪೂರೈಕೆ ಮುನ್ನ ಅದು ಕುಡಿಯಲು ಯೋಗ್ಯವಾಗಿದೆ0iÉುೀ ಎಂದು ಪರೀಕ್ಷಿಸಿ ಪೂರೈಸಬೇಕು ಎಂದು ಸಿ.ಎಂ. ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆಗಾರರಾಗುತ್ತಾರೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು.
ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿ0iÉು ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.