ಬೆಂಗಳೂರು: ರಾಜ್ಯದ ಜೀವನದಿ ಕಾವೇರಿಗೆ ಕಲುಷಿತ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ ಎಂದು ಮಾದ್ಯಮಗಳಲ್ಲಿ ವರದಿ ಆಗಿದ್ದು ಅನಾಹುತ ತಡೆಯಲು ತಾಂತ್ರಿಕ ಪರಿಣಿತರ ತನಿಖಾ ತಂಡವನ್ನು ರಚನೆ ಮಾಡಬೇಕು. ಈ ತಂಡವು ಅಧ್ಯಯನ ನಡೆಸಿ ವರದಿ ನೀಡಿದ ಬಳಿಕ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿರುವ ಶಾಸಕರಾದ ದಿನೇಶ್ ಗೂಳಿಗೌಡ ಅವರು, ತ್ಯಾಜ್ಯ ಮಿಶ್ರಿತ ನೀರಿನಿಂದ ಕಾವೇರಿ ನದಿ ನೀರು ಕಲುಷಿತ ಆಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ತುರ್ತು ಗಮನಹರಿಸಬೇಕಿದೆ. ಕೂಡಲೇ ತಾಂತ್ರಿಕ ಪರಿಣಿತರ ತನಿಖಾ ತಂಡವನ್ನು ರಚನೆ ಮಾಡಬೇಕಿದೆ ಎಂದು ಮನವಿ ಮಾಡಿದ್ದಾರೆ.
ಪರಿಸರ, ಕೈಗಾರಿಕೆ, ನೀರಾವರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ವರ್ಗದ ತಜ್ಞರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಬೇಕು. ಈ ಸಮತಿಯವರು ಕೂಲಂಕಷವಾಗಿ ಅಧ್ಯಯನ ಮಾಡಿ ಸೂಕ್ತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತಾಗಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.